ಬೆಂಗಳೂರು, ಅ.14- ರಾಜ್ಯ ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇದೇ 16 ಕಡೆಯ ದಿನವಾಗಿದ್ದು, ಬಹುತೇಕ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಳೆಯೇ ನಾಮಪತ್ರ ಸಲ್ಲಿಸಲಿದ್ದಾರೆ.
ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಬಹುತೇಕ ಅಭ್ಯರ್ಥಿಗಳು ನಾಳೆಯೇ ನಾಮಪತ್ರ ಸಲ್ಲಿಸುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಎರಡು ವಿಧಾನಸಭಾ ಕ್ಷೇತ್ರ ಹಾಗೂ ಮೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ನಾಳೆ ಆಯಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಲು ಬಿಜೆಪಿ ಅಭ್ಯರ್ಥಿಗಳು ಸಿದ್ಧತೆ ನಡೆಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಅಭ್ಯರ್ಥಿಗಳು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಸಾಧ್ಯತೆಗಳಿವೆ. ರಾಜ್ಯದ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿವೆ.
ಆದರೂ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಇನ್ನೂ ಉಭಯ ಪಕ್ಷಗಳಲ್ಲಿ ಅಂತಿಮಗೊಂಡಿಲ್ಲ. ಉಭಯ ಪಕ್ಷಗಳ ನಾಯಕರು ಅಭ್ಯರ್ಥಿಗಳ ಆಯ್ಕೆಯ ಅಂತಿಮ ಕಸರತ್ತು ನಡೆಸುತ್ತಿದ್ದಾರೆ. ಇಂದು ರಾತ್ರಿ ಅಥವಾ ನಾಳೆಯೊಳಗೆ ಅಭ್ಯರ್ಥಿಗಳ ಅಧಿಕೃತ ಘೋಷಣೆಯನ್ನು ಉಭಯ ಪಕ್ಷಗಳು ಮಾಡುವ ಸಾಧ್ಯತೆಗಳಿವೆ.
ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಳೆ ಮಾಜಿ ಶಾಸಕಿ ಅನಿತಾಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‍ನ ಸ್ಥಳೀಯ ನಾಯಕರು ಹಾಜರಿರಲಿದ್ದಾರೆ. ಈ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸುವುದಿಲ್ಲ.
ಬಿಜೆಪಿ ಅಭ್ಯರ್ಥಿಯಾಗಿ ವಿಧಾನಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರ ಪುತ್ರ ಚಂದ್ರಶೇಖರ್ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸೇರಿದಂತೆ ಪಕ್ಷದ ಸ್ಥಳೀಯ ನಾಯಕರು ಉಪಸ್ಥಿತರಿರುತ್ತಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಜಮಖಂಡಿ ವಿಧಾನಸಭಾ ಕ್ಷೇತ್ರವನ್ನು ಜೆಡಿಎಸ್ ಪಕ್ಷ ಕಾಂಗ್ರೆಸ್‍ಗೆ ಬಿಟ್ಟುಕೊಟ್ಟಿದೆ. ಮಾಜಿ ಸಚಿವ ದಿವಂಗತ ಸಿದ್ದುನ್ಯಾಮೆಗೌಡರ ಪುತ್ರ ಆನಂದ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಇವರು ಕೂಡ ನಾಳೆ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.
ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಶ್ರೀಕಾಂತ್ ಕುಲಕರ್ಣಿ ನಾಮಪತ್ರ ಸಲ್ಲಿಸಲಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಸ್ಥಳೀಯ ನಾಯಕರು ಸಾಥ್ ನೀಡಲಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷ ಜೆಡಿಎಸ್‍ಗೆ ಬಿಟ್ಟುಕೊಟ್ಟಿದೆ. ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ಬಿಜೆಪಿಯಿಂದ ಡಾ.ಸಿದ್ದರಾಮಯ್ಯ ಅಭ್ಯರ್ಥಿಯಾಗಿ ಈ ಕ್ಷೇತ್ರದಲ್ಲಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಸೇರಿದಂತೆ ಬಿಜೆಪಿ ಸ್ಥಳೀಯ ನಾಯಕರು ಉಪಸ್ಥಿತರಿರಲಿದ್ದಾರೆ.
ಬಳ್ಳಾರಿ ಲೋಕಸಭಾ (ಎಸ್ಟಿ) ಕ್ಷೇತ್ರವನ್ನು ಜೆಡಿಎಸ್ ಪಕ್ಷ ಕಾಂಗ್ರೆಸ್‍ಗೆ ಬಿಟ್ಟುಕೊಟ್ಟಿದೆ. ಈ ಕ್ಷೇತ್ರದಲ್ಲೂ ಇದುವರೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ, ವೆಂಕಟೇಶ್‍ಪ್ರಸಾದ್, ನೆಟ್ಕಲ್ಲಪ್ಪ ಸೇರಿದಂತೆ ಹಲವರ ಹೆಸರುಗಳು ಪ್ರಸ್ತಾಪವಾಗುತ್ತಿದ್ದು, ನಾಳೆಯೊಳಗೆ ಅಧಿಕೃತ ಅಭ್ಯರ್ಥಿ ಘೋಷಣೆಯಾಗುವ ಸಾಧ್ಯತೆಗಳಿವೆ.
ಬಿಜೆಪಿಯಿಂದ ಮಾಜಿ ಸಂಸದೆ ಜೆ.ಶಾಂತ ನಾಳೆ ನಾಮಪತ್ರ ಸಲ್ಲಿಸಲಿದ್ದು, ಮಾಜಿ ಸಚಿವ ಬಿ.ಶ್ರೀರಾಮುಲು ಸೇರಿದಂತೆ ಸ್ಥಳೀಯ ನಾಯಕರು ಹಾಜರಿರಲಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಂಸದ ಬಿ.ವೈ.ರಾಘವೇಂದ್ರ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರು ಸಾಥ್ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಈ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಮಾಜಿ ಶಾಸಕ ಮಧುಬಂಗಾರಪ್ಪ ಅವರನ್ನು ಕಣಕ್ಕಿಳಿಸಲು ಉದ್ದೇಶಿಸಲಾಗಿದೆ. ವಿದೇಶ ಪ್ರವಾಸದಲ್ಲಿರುವ ಮಧುಬಂಗಾರಪ್ಪ ಇಂದು ರಾತ್ರಿ ಮರಳಲಿದ್ದು, ನಾಳೆ ಸ್ಪರ್ಧೆ ಬಗ್ಗೆ ಸ್ಪಷ್ಟ ಚಿತ್ರಣ ಹೊರ ಬರಲಿದೆ.
ಭರ್ಜರಿ ಪ್ರಚಾರಕ್ಕೆ ಬಿಜೆಪಿ ಸಿದ್ಧತೆ
ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳು ಮತ್ತು ಮೂರು ಲೋಕಸಭಾ ಕ್ಷೇತ್ರಗಳಿಗೆ ಎದುರಾಗಿರುವ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿರುವ ಬಿಜೆಪಿ ಮೈತ್ರಿ ಕೂಟಕ್ಕಿಂತಲೂ ಮೊದಲೇ ಪ್ರಚಾರ ಕಣಕ್ಕೆ ದುಮುಕಲು ಸಿದ್ಧವಾಗಿದೆ.
ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುವುದರಿಂದ ಎಲ್ಲಾ ಅಭ್ಯರ್ಥಿಗಳು ನಾಳೆಯೇ ಉಮೇದುವಾರಿಕೆ ಸಲ್ಲಿಸಲಿದ್ದು, ಅ.16ರಿಂದ ಎಲ್ಲಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ಆರಂಭಗೊಳ್ಳಲಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ-ಚುನಾವಣೆ ಪ್ರಚಾರಕ್ಕೆ ಬಿಜೆಪಿ ಆಗಲೇ ಬಿರುಸಿನ ಪ್ರಚಾರ ಆರಂಭಿಸಿದೆ. ವಿಧಾನ ಸಭಾ ವಿಪಕ್ಷ ನಾಯಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರದಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಅವರ ಪರ ಪ್ರಚಾರವನ್ನು ಭರ್ಜರಿಯಾಗಿಯೇ ಆರಂಭಿಸಿದ್ದಾರೆ.
ಶಿಕಾರಿಪುರದಲ್ಲಿ ಇತ್ತೀಚೆಗೆ ಪಕ್ಷದ ನಾಯಕರು ಒಟ್ಟಾಗಿ ಸೇರಿ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಹಿಂದೇಟು ಹಾಕಿರುವುದರಿಂದ ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯುವುದು ಬಹುತೇಕ ಖಾತರಿಯಾಗಿದೆ. ಉಪ-ಚುನಾವಣೆಯನ್ನ ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಬೈಂದೂರು ವಿಧಾನ ಸಭಾ ಕ್ಷೇತ್ರ ಹಾಗೂ ಶಿವಮೊಗ್ಗದ ಏಳು ವಿಧಾನ ಸಭಾ ಕ್ಷೇತ್ರ ಸೇರಿ ಒಟ್ಟು 8 ವಿಧಾನ ಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರಕ್ಕೆ ಸಿದ್ಧತೆ ನಡೆಸಲಾಗುತ್ತಿದೆ.
ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಳು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದು, ಒಂದು ಮಾತ್ರ ಕಾಂಗ್ರೆಸ್ ಕೈಯಲ್ಲಿದೆ. ಆದ್ದರಿಂದ ಇಲ್ಲಿ ಬಿಜೆಪಿ ಗೆಲುವು ಸುಲಭ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಜೆಡಿಎಸ್‍ನಿಂದ ಮಧು ಬಂಗಾರಪ್ಪ ಕಣಕ್ಕಿಳಿದರೆ ಫಲಿತಾಂಶದಲ್ಲಿ ಏರುಪೇರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿಗಳಾಗಿರುವ ಈಶ್ವರಪ್ಪ, ಜಿ.ಎಂ.ಸಿದ್ದೇಶ್ವರ, ಶಿವಕುಮಾರ್ ಉದಾಸಿ, ವಿ.ಸುನೀಲ್ ಕುಮಾರ್, ಪಿ.ರಾಜೀವ್, ಎನ್. ಜೀವರಾಜ್ ಅವರು ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿ ಪ್ರಚಾರದ ರೂಪುರೇಷೆಗಳನ್ನು ಸಿದ್ಧಪಡಿಸಿದ್ದಾರೆ.
ಇನ್ನು ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಅವರನ್ನು ಗೆಲ್ಲಿಸಲು ಬೇಕಾದ ಎಲ್ಲಾ ತಯಾರಿಗಳನ್ನು ಶಾಂತಾ ಅವರ ಸಹೋದರ ಬಿ.ಶ್ರೀರಾಮುಲು ನಡೆಸುತ್ತಿದ್ದಾರೆ. ಅವರಿಗೆ ಮುಖಂಡರಾದ ರಮೇಶ್ ಜಿಗಜಿಣಗಿ, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಸಿ.ಟಿ.ರವಿ, ಎನ್.ರವಿಕುಮಾರ್ ಪ್ರಭು ಚವ್ಹಾಣ್, ರಾಮಣ್ಣ ಲಮಾಣಿ ಸಾಥ್ ನೀಡುತ್ತಿದ್ದಾರೆ.
ಇನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಅವರನ್ನು ಬಿಜೆಪಿ ಕಣಕ್ಕಿಳಿಸಿದ್ದು, ಅಲ್ಲಿನ ಪ್ರಚಾರದ ಉಸ್ತುವಾರಿಯನ್ನು ಮುಖಂಡರಾದ ಆರ್. ಅಶೋಕ, ಪ್ರತಾಪ್ ಸಿಂಹ, ನಾಗೇಂದ್ರ, ಡಿ.ಎಸ್.ವೀರಯ್ಯ ಅವರಿಗೆ ವಹಿಸಲಾಗಿದೆ.
ಜಮಖಂಡಿಯಿಂದ ಶ್ರೀಕಾಂತ ಕುಲಕರ್ಣಿ ಬಿಜೆಪಿಯಿಂದ ನಾಳೆ ಉಮೇದುವಾರಿಕೆ ಸಲ್ಲಿಸಲಿದ್ದು, ಪಕ್ಷದ ಮುಖಂಡರಾದ ಜಗದೀಶ ಶೆಟ್ಟರ್, ಮುರುಗೇಶ ನಿರಾಣಿ, ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ, ಪಿ.ಸಿ.ಗದ್ದಿಗೌಡರ್, ಪ್ರಭಾಕರ ಕೋರೆ ಅವರು ಗೆಲುವಿಗಾಗಿ ಕಸರತ್ತು ನಡೆಸುತ್ತಿದ್ದಾರೆ.