ಲೋಕಸಭೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಅ.15- ಮಿನಿಳಿ ಮರ ಎಂದೇ ಬಿಂಬಿತವಾಗಿರುವ ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮೂರು ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಕಾಂಗ್ರೆಸ್ ಹೊರತು ಪಡಿಸಿ ಉಳಿದ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಕುಮಾರ ಸ್ವಾಮಿ ಅವರು ಬಿಟ್ಟಿರುವ ರಾಮನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರ ಸ್ವಾಮಿ, ಬಿಜೆಪಿಯಿಂದ ಚಂದ್ರ ಶೇಖರ್ ಕಣಕ್ಕಿಳಿದಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ, ಜೆಡಿಎಸ್‍ನಿಂದ ಮಾಜಿ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಂಗರಪ್ಪ ಅವರ ಪುತ್ರ ಮಧು ಬಂಗಾರಪ್ಪ ಕಣಕ್ಕಿಳಿದಿದ್ದಾರೆ.

ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಎಲ್.ಆರ್.ಶಿವರಾಮೇಗೌಡ, ಬಿಜೆಪಿಯಿಂದ ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಡಾ.ಸಿದ್ದರಾಮಯ್ಯ ಕಣದಲ್ಲಿದ್ದಾರೆ. ಈ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ, ಜೆಡಿಎಸ್‍ಗೆ ಬೆಂಬಲ ನೀಡಲಿದೆ.
ಇನ್ನೂ ಬಾಗಲಕೋಟೆ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ದಿವಗಂತ ಸಿದ್ದು ನ್ಯಾಮೇಗೌಡರ ಪುತ್ರ ಆನಂದ ನ್ಯಾಮೇಗೌಡ, ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಶ್ರೀಕಾಂತ್ ಕುಲಕರ್ಣಿ ಕಣದಲ್ಲಿದ್ದಾರೆ.

ಕುತುಹಲ ಕೆರಳಿಸಿದ್ದ ಬಳ್ಳಾರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಂಸದೆ ಜೆ.ಶಾಂತ ಕಣದಲ್ಲಿದ್ದರೆ, ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅವರನ್ನು ಕಣಕ್ಕಿಳಿಸಿದೆ. ಕೊನೆಯ ಕ್ಷಣದವರೆಗೂ ಶಾಸಕ ನಾಗೇಂದ್ರ ಅವರ ಸಹೋದರ ವೆಂಕಟೇಶ್ ಪ್ರಸಾದ್ ಅವರು ಬಿ.ಫಾರಂ ಪಡೆಯಲು ಹರ ಸಾಹಸ ನಡೆಸಿದರು. ಆದರೆ ಅಂತಿಮ ಕ್ಷಣದಲ್ಲಿ ಸಿದ್ದರಾಮಯ್ಯ ಅವರ ಶಿಫಾರಸ್ಸಿನಂತೆ ಉಗ್ರಪ್ಪ ಅವರಿಗೆ ಬಿ ಫಾರಂ ನೀಡಲಾಗಿದೆ. ಈ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದೆ. ದೋಸ್ತಿ ಪಕ್ಷಗಳ ಪರಸ್ಪರ ಬೆಂಬಲ ನೀಡುವುದಷ್ಟೇ ಅಲ್ಲ, ಜಂಟಿಯಾಗಿ ಪ್ರಚಾರ ನಡೆಸಲು ತೀರ್ಮಾನಿಸಿವೆ.

ಪತ್ರ ಸಲ್ಲಿಕೆಯ ಭರಾಟೆ:
ಉಪಸಮರಕ್ಕೆ ನಾಳೆ ನಾಮಪತ್ರ ಸಲ್ಲಿಸಲು ನಾಳೆ ಕಡೆಯ ದಿನವಾಗಿರುವುದರಿಂದ ಇಂದು ಅನೇಕರು ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ರಾಜಕೀಯ ಕರ್ಮಭೂಮಿ ರಾಮನಗರದಲ್ಲಿ ಪತ್ನಿ ಅನಿತಾಕುಮಾರಸ್ವಾಮಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈರಾಘವೇಂದ್ರ ಶಿವಮೊಗ್ಗ, ಗಣಿ ಜಿಲ್ಲೆ ಬಳ್ಳಾರಿಯಿಂದ ಶಾಸಕ ಶ್ರೀರಾಮುಲು ಸಹೋದರಿ ಜೆ.ಶಾಂತ, ಸಕ್ಕರೆ ಜಿಲ್ಲೆ ಮಂಡ್ಯದಿಂದ ಮಾಜಿ ಶಾಸಕ ಶಿವರಾಮೇಗೌಡ ಸೇರಿದಂತೆ ಅನೇಕ ದಿಗ್ಗಜರು ಬಲಾಬಲ ಪ್ರದರ್ಶಿಸುವುದರೊಂದಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತದಲ್ಲಿ ಉಗ್ರಪ್ಪ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮೇಗೌಡ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.

ಕಣವಾಗಿ ಮಾರ್ಪಟ್ಟಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಕೆಲವು ಕಾರಣಗಳಿಂದ ನಾಮಪತ್ರ ಇಂದು ಸಲ್ಲಿಸಲು ಸಾಧ್ಯವಾಗಿಲ್ಲ.
ನಾಳೆ ಅವರು ನಾಮಪತ್ರ ಸಲ್ಲಿಸಲಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಚುನಾವಣಾ ಉಸ್ತುವಾರಿ ಆರ್.ವಿ.ದೇಶಪಾಂಡೆ, ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.

ಜೆಡಿಎಸ್‍ನ ಶಕ್ತಿಪ್ರದರ್ಶನವಾಗಲಿದೆ. ಕುಮಾರಸ್ವಾಮಿಯವರ ನಿರ್ದೇಶನದಂತೆಯೇ ಮಧುಬಂಗಾರಪ್ಪ ನಾಳೆ ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಸುವರು. ತಡರಾತ್ರಿ ವಿದೇಶದಿಂದ ಆಗಮಿಸಿರುವ ಮಧುಬಂಗಾರಪ್ಪ ಜೆಡಿಎಸ್ ವರಿಷ್ಠರೂ ಆಗಿರುವ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿ ಬಿ ಫಾರಂ ಪಡೆದುಕೊಂಡಿದ್ದಾರೆ. ಕುಮಾರಸ್ವಾಮಿ ರಾಮನಗರಕ್ಕೆ ತೆರಳಬೇಕಾದ ಹಿನ್ನೆಲೆಯಲ್ಲಿ ಮಧುಬಂಗಾರಪ್ಪ ನಾಮಪತ್ರವನ್ನು ಮುಂದೂಡಲಾಗಿದೆ.

ಗಮನ ಸೆಳೆದಿರುವ ರಾಮನಗರದಲ್ಲಿ ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಅನಿತಾಕುಮಾರಸ್ವಾಮಿ ಭರ್ಜರಿ ಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ರಾಮನಗರದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ದಂಪತಿಗಳು ವಿಶೇಷ ಪೂಜೆ ಮಾಡಿಸಿ ಅಲ್ಲಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಸಂಸದ ಡಿ.ಕೆ.ಸುರೇಶ್, ಶಾಸಕರು, ಪಕ್ಷದ ಮುಖಂಡರು ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಮುಖ್ಯಮಂತ್ರಿಗಳ ಪುತ್ರರ ಸ್ಪರ್ಧೆಯಿಂದ ರಾಜ್ಯದಲ್ಲೇ ಗಮನಸೆಳೆದ ಮತ್ತೊಂದು ಕ್ಷೇತ್ರ ಶಿವಮೊಗ್ಗದಲ್ಲಿ ಯಡಿಯೂರಪ್ಪನವರ ಪುತ್ರ ಬಿ.ವೈ.ರಾಘವೇಂದ್ರ ಶಕ್ತಿ ಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಶಿವಮೊಗ್ಗದಲ್ಲಿರುವ ಕೋಟೆ ಆಂಜನೇಯ ರಾಮಣ್ಣಶೆಟ್ಟಿ ಪಾರ್ಕ್‍ನಲ್ಲಿರುವ ಗಣಪತಿ ದೇವಸ್ಥಾನ, ರಾಘವೇಂದ್ರ ಮಠ ಹಾಗೂ ಶಿವ ದೇವಾಲಯಗಳಿಗೆ ಭೇಟಿ ನೀಡಿ ಆರ್ಶೀವಾದ ಪಡೆದರು.

ಕೋಟೆ ಆಂಜನೇಯ ದೇವಸ್ಥಾನದಿಂದ ತೆರೆದ ವಾಹನದಲ್ಲಿ ಬಿ.ವೈ. ರಾಘವೇಂದ್ರಗೆ ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ, ಶಾಸಕರಾದ ಹರತಾಳ್ ಹಾಲಪ್ಪ, ಕುಮಾರ್ ಬಂಗಾರಪ್ಪ, ಅಶೋಕ್ ನಾಯಕ್, ಅರಗ ಜ್ಞಾನೇಂದ್ರ, ಎಂ.ಪಿ.ರೇಣುಕಾಚಾರ್ಯ, ಮಾಡಾಳು ವಿರೂಪಾಕ್ಷಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ರುದ್ರೇಶ್ ಗೌಡ, ಭಾನುಪ್ರಕಾಶ್ ಸೇರಿದಂತೆ ಮತ್ತಿತರರು ಸಾಥ್ ನೀಡಿದರು.

ಪಾರ್ಕ್‍ನಿಂದ ಆದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದರು.
ಶಿವರಾಮೇಗೌಡ ನಾಮಪತ್ರ ಸಲ್ಲಿಕೆ:
ಸಕ್ಕರೆ ನಾಡು ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.

ಮುನ್ನ ಶಿವರಾಮೇಗೌಡ ನಾಗಮಂಗಲದಲ್ಲಿರುವ ಆದಿಚುಂಚನಗಿರಿಯ ಕಾಲಭೆರೇಶ್ವರನ ಸನ್ನಿಧಿಗೆ ತೆರಳಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದರು. ನಂತರ ಮಂಡ್ಯದಲ್ಲಿರುವ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.

ಡಿ.ಸಿ.ತಮಣ್ಣ, ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ಶಾಸಕರಾದ ಸುರೇಶ್ ಗೌಡ, ನಾರಾಯಣಗೌಡ, ಶ್ರೀನಿವಾಸ್, ರವೀಂದ್ರ ಶ್ರೀಕಂಠಯ್ಯ ಸೇರಿದಂತೆ ಸ್ಥಳೀಯ ಜೆಡಿಎಸ್ ಮುಖಂಡರ ಜೊತೆ ಭರ್ಜರಿ ಪ್ರದರ್ಶನ ನಡೆಸುವುದರೊಂದಿಗೆ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಅಭ್ಯರ್ಥಿಯಾಗಿರುವ ಶಾಸಕ ಶ್ರೀರಾಮುಲು ಸಹೋದರಿ ಜೆ.ಶಾಂತ ಕೂಡ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಶಾಸಕರಾದ ಶ್ರೀರಾಮುಲು, ಸೋಮಶೇಖರ್ ರೆಡ್ಡಿ, ಎಂ.ವೈ.ಗೋಪಾಲಕೃಷ್ಣ ಸೇರಿದಂತೆ ಸಾಥ್ ನೀಡಿದರು.
ಮೂಲಗಳ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ ನಾಳೆ ಬಳ್ಳಾರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ