ಬಾಗಲಕೋಟೆ, ಅ.16-ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒಬ್ಬ ಸುಳ್ಳುಗಾರ, ಅವರಿಗೆ ದೊಡ್ಡ ಶಾಕ್ ಕಾದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು.
ಉಪ ಚುನಾವಣೆಯ ಹೊಸ್ತಿಲಲ್ಲೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಟೀಕಾಪ್ರಹಾರ ಮಾಡಿರುವ ಸಿದ್ದರಾಮಯ್ಯ, ಯಡಿಯೂರಪ್ಪ ಬಾಯಿ ಬಿಟ್ಟರೆ ಸುಳ್ಳು ಹೇಳುತ್ತಾರೆ. ಅಂದಿನಿಂದಲೂ ಸರ್ಕಾರ ಬೀಳುತ್ತೆ ಬೀಳುತ್ತೆ ಎಂದು ಗೊಣಗುತ್ತಿದ್ದಾರೆ, ಆದರೆ ಸರ್ಕಾರ ಬಿತ್ತೇ ? ಎಂದು ಪ್ರಶ್ನಿಸಿದರು.
ಯಡಿಯೂರಪ್ಪ ಅವರು ಕಾಂಗ್ರೆಸ್ಗೆ ಶಾಖ್ ಕಾದಿದೆ ಎಂದು ಹೇಳಿಕೆ ನೀಡಿದ್ದಾರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿ.ಎಸ್.ಯಡಿಯೂರಪ್ಪ ಇಷ್ಟು ದಿನ ಸರ್ಕಾರ ಬೀಳುತ್ತೆ ಅಂತಿದ್ರು, ಸರ್ಕಾರ ಬಿತ್ತಾ ಎಂದು ಮರು ಪ್ರಶ್ನೆ ಹಾಕಿದರು.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಬಳ್ಳಾರಿ ಜಿಲ್ಲಾ ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲವನ್ನೂ ವಿಚಾರ ಮಾಡಿಯೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಒಟ್ಟಾಗಿ ಶ್ರಮಿಸಲಿದ್ದಾರೆ ಎಂದರು.
ಬಳ್ಳಾರಿ ಜಿಲ್ಲೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಾರೆ. ಪಕ್ಷದ ಅಭ್ಯರ್ಥಿಯ ಆಯ್ಕೆ ಸರಿಯಾಗಿಯೇ ಇದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಕೆಲವು ಕಡೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಅದೇ ರೀತಿ ಕೆಲವು ಕಡೆ ಜೆಡಿಎಸ್ ಪಕ್ಷ ತಮ್ಮ ಅಭ್ಯರ್ಥಿಗಳನ್ನ ಕಣಕ್ಕಿಳಿಸಿಲ್ಲ. ಉಪ ಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲೂ ಮೈತ್ರಿ ಪಕ್ಷ ಗೆಲುವು ಸಾಧಿಸಲಿದೆ ಎಂದು ಹೇಳಿದರು.
ಕಾಂಗ್ರೆಸ್ ಬಂಡಾಯ ನಾಯಕ ಸುಶಿಲ್ ಕುಮಾರ್ ಬೆಳಗಲಿ ಅವರ ಜೊತೆ ಮಾತುಕತೆ ನಡೆಸಿದ ಸಿದ್ದರಾಮಯ್ಯ, ಮುಂದಿನ ದಿನಗಳಲ್ಲಿ ಪಕ್ಷ ಮತ್ತು ಸರ್ಕಾರದಲ್ಲಿ ಉನ್ನತ ಹುದ್ದೆ ನೀಡುವುದಾಗಿ ಭರವಸೆ ನೀಡಿದರು. ಸಿದ್ದರಾಮಯ್ಯ ಅವರ ಭರವಸೆಗೆ ಮಣಿದಿರುವ ಸುಶಿಲ್ ಕುಮಾರ್ ಬಂಡಾಯ ಕೈಬಿಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.