ಬೆಂಗಳೂರು, ಅ.16- ರಾಜ್ಯ ವಿಧಾನಸಭೆ ಹಾಗೂ ಲೋಕಸಭೆಗಳ ಉಪಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ನಾಳೆ ನಡೆಯಲಿದೆ.
ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಾಗೂ ಮಂಡ್ಯ, ಬಳ್ಳಾರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ನಾಳೆ ಆಯಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ, ಬಿಜೆಪಿಯಿಂದ ಡಾ.ಸಿದ್ದರಾಮಯ್ಯ, ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ನಿಂದ ಮಾಜಿ ಶಾಸಕ ಮಧು ಬಂಗಾರಪ್ಪ, ಮಾಜಿ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಮಾಜಿ ಸಂಸದೆ ಜೆ.ಶಾಂತಾ, ಕಾಂಗ್ರೆಸ್ನಿಂದ ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.
ರಾಮನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ, ಬಿಜೆಪಿ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಅವರ ಪುತ್ರ ಎಲ್.ಚಂದ್ರಶೇಖರ್ ನಾಮಪತ್ರ ಸಲ್ಲಿಸಿದ್ದಾರೆ.
ಜಮಖಂಡಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆನಂದ್ ಸಿದ್ದನ್ಯಾಮೇಗೌಡ, ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಶ್ರೀಕಾಂತ್ ಕುಲಕರ್ಣಿ ಉಮೇದುವಾರಿಕೆ ಸಲ್ಲಿಸಿದ್ದಾರೆ.
ನಾಮಪತ್ರಗಳನ್ನು ವಾಪಸ್ ಪಡೆಯಲು ಅ.20ರ ವರೆಗೂ ಕಾಲಾವಕಾಶವಿದ್ದು, ಅಂದು ಸಂಜೆ ವೇಳೆಗೆ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಅಂತಿಮ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. ಲೋಕಸಭೆ ಹಾಗೂ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ನ.3ರಂದು ಮತದಾನ ನಡೆಯಲಿದೆ. ನ.6ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.