ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಅ. 25ರಂದು ದೇಶವ್ಯಾಪ್ತಿ ಧರಣಿ ಸತ್ಯಾಗ್ರಹ

ಬೆಂಗಳೂರು,ಅ.17-ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅ.25ರಂದು ದೇಶವ್ಯಾಪಿ ಧರಣಿ ಸತ್ಯಾಗ್ರಹ ನಡೆಸಲು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೇದಿಕೆ ತೀರ್ಮಾನಿಸಿದೆ.

ಸುದ್ದಿಗೋಷ್ಠಿಯಲ್ಲಿ ವೇದಿಕೆ ಅಧ್ಯಕ್ಷ ಡಾ.ಎಚ್.ವಿ.ವಾಸು ಮಾತನಾಡಿ, ಆರೋಗ್ಯ ಇಲಾಖೆಯ ಎಲ್ಲಾ ಗುತ್ತಿಗೆ ನೌಕರರಿಗೆ ಸಮಾನ ವೇತನ ಹಾಗೂ ಸೇವಾ ಭದ್ರತೆ ಸಿಗಬೇಕು, ಸಾರ್ವಜನಿಕ ಆರೋಗ್ಯ ಇಲಾಖೆ ಬಲಗೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಗುತ್ತಿಗೆ ಎಂಬ ಸಂಕೋಲೆಯನ್ನು ಕಳಚಿ ಹಾಲಿ ಕೆಲಸ ನಿರ್ವಹಿಸುತ್ತಿರುವವರಿಗೆ ಘನತೆಯುಳ್ಳ ಸೇವಾ ನಿಯಮಗಳು ಮತ್ತು ವೇತನ ಶ್ರೇಣಿಯನ್ನು ಕಲ್ಪಿಸಬೇಕೆಂದು ಒತ್ತಾಯಿಸಿ ರಾಜ್ಯದ ಆರೋಗ್ಯ ಇಲಾಖೆಯ 30 ಸಾವಿರ ಗುತ್ತಿಗೆ ನೌಕರರು ಧರಣಿ ನಡೆಸುತ್ತಿರುವುದಾಗಿ ತಿಳಿಸಿದರು.

ಕರ್ನಾಟಕದಲ್ಲಿ ರಾಜ್ಯ ಸರ್ಕಾರಿ ಗುತ್ತಿಗೆ ನೌಕರರ ಮಹಾ ಒಕ್ಕೂಟವು ಎಲ್ಲಾ ಇಲಾಖೆಗಳ ಎಲ್ಲಾ ಗುತ್ತಿಗೆ ನೌಕರರನ್ನು ಒಂದೇ ವೇದಿಕೆಗೆ ತಂದು ನೌಕರರ ಹಕ್ಕುಗಳಿಗಾಗಿ ಮತ್ತು ಸಾರ್ವಜನಿಕ ಸೇವೆಗಳ ಬಲವರ್ಧನೆಗಾಗಿ ಪ್ರಯತ್ನಿಸುತ್ತಿದೆ. ಅದೇ ರೀತಿಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರನ್ನು ದೇಶಾದ್ಯಂತ ಒಂದು ವೇದಿಕೆಗೆ ತರುವ ಪ್ರಯತ್ನವೂ ಆರಂಭವಾಗಿದೆ ಎಂದರು.
ಹಾಗಾಗಿ ದೇಶದ ಎಲ್ಲಾ ರಾಜ್ಯಗಳ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ಸಮಸ್ಯೆಗಳನ್ನು ಮುಂದಿಟ್ಟು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಮನವಿಸಲ್ಲಿಸುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಶ್ವಾರಾಧ್ಯ,ಸರೋವರಸೇರಿದಂತೆ ಮತ್ತಿತರರು ಇದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ