ಬೆಂಗಳೂರು, ಅ.17-ಕಲ್ಲಿದ್ದಲು ಹಂಚಿಕೆ ಸೇರಿದಂತೆ ಹಲವು ವಿಚಾರಗಳಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.
ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ನಡೆದ ಆಯುಧಪೂಜೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರುವುದು ನಿಜ. ಕೇವಲ ಕಲ್ಲಿದ್ದಲು ಹಂಚಿಕೆ ವಿಚಾರ ಮಾತ್ರವಲ್ಲ, ಹಲವು ವಿಷಯಗಳಲ್ಲೂ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಆಪಾದಿಸಿದರು.
ರಾಜ್ಯಕ್ಕೆ ಕಲ್ಪಿಸುವ ಸೌಲಭ್ಯದ ವಿಚಾರದಲ್ಲಿ ತಾರತಮ್ಯ ಎದುರಾಗಿರುವ ಬಗ್ಗೆ ಸೂಕ್ತ ಸಂದರ್ಭದಲ್ಲಿ ಪ್ರಸ್ತಾಪಿಸುವುದಾಗಿ ಅವರು ಹೇಳಿದರು.
ಆಯುಧಪೂಜೆಯಲ್ಲಿ ಬೆಂಗಳೂರು ನಗರ ಘಟಕ ಅಧ್ಯಕ್ಷ ಆರ್.ಪ್ರಕಾಶ್ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.