ಮಧ್ಯಪ್ರದೇಶ ವಿಧಾನಸಭಾ ಚುನಾವಣೆ: ಹಾಲಿ ಶಾಸಕರಿಗೆ ಕೊಕ್; ಹೊಸಬರಿಗೆ ಟಿಕೆಟ್

ಭೋಪಾಲ್:  ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಶಿವರಾಜ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಹಿನ್ನಡೆಯಾಗಲಿದೆ ಎಂದು ಬಹುತೇಕ ಸಮೀಕ್ಷೆಗಳು ವರದಿ ನೀಡಿದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಆಡಳಿತಾರೂಢ ಬಿಜೆಪಿ ಹಾಲಿ 70 ರಿಂದ 80 ಶಾಸಕರನ್ನು ಹೊರಗಿಟ್ಟು ಹೊಸ ಮುಖಗಳಿಗೆ ಟಿಕೆಟ್‌ ನೀಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ನವೆಂಬರ್‌ 28 ರಂದು ನಡೆಯಲಿರುವ ಚುನಾವಣೆಯಲ್ಲಿ 15 ವರ್ಷಗಳಿಂದ ಆಡಳಿತದಲ್ಲಿರುವ ಬಿಜೆಪಿ ಈ ಬಾರಿಯೂ ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ನಾಯಕತ್ವದ ಬಗ್ಗೆ ಅಷ್ಟೇನೂ ಅಸಮಾಧಾನವಿಲ್ಲ. ಆದರೆ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಗಮನಕೊಡದೇ ನಿರ್ಲಕ್ಷ್ಯ ತೋರಿದ ಶಾಸಕರ ಬಗ್ಗೆ ಜನರಲ್ಲಿ ಅತೃಪ್ತಿ ಇದೆ. ”ಇಂತಹ ಶಾಸಕರು ನಮಗೆ ಬೇಕಾಗಿಲ್ಲ, ಅವರನ್ನು ಈ ಬಾರಿ ಸೋಲಿಸಿಬಿಡೋಣ,” ಎಂಬಂತಹ ಮಾತುಗಳು ಕೇಳಿಬರುತ್ತಿವೆ. ‘ಜನ ಆಶೀರ್ವಾದ ಯಾತ್ರೆ’ ವೇಳೆ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಇಂತಹ ಸೋಮಾರಿ ಶಾಸಕರ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ಸುಮಾರು 70ರಿಂದ 80 ಹಾಲಿ ಶಾಸಕರನ್ನು ಹೊರಗಿಟ್ಟು ಹೊಸ ಮುಖಗಳಿಗೆ ಮಣೆ ಹಾಕಲು ಚಿಂತನೆ ನಡೆಸಿದೆ.

2013ರ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ 25 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಈ ಪೈಕಿ ಶೇಕಡ 75ರಷ್ಟು ಅಭ್ಯರ್ಥಿಗಳು ಗೆಲುವು ಸಾಸಿದ್ದರು. ಈ ಬಾರಿಯ ಚುನಾವಣೆಯಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಹೊಸಬರಿಗೆ ಆದ್ಯತೆ ನೀಡಿದಲ್ಲಿ 150ರ ಗಡಿದಾಟಬಹುದು ಎಂಬ ಲೆಕ್ಕಾಚಾರ ಬಿಜೆಪಿಯದ್ದಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ