ಸುಡುವ ಬಿಸಿಲನ್ನೂ ಲೆಕ್ಕಿಸದೆ ಬಿಜೆಪಿಯ ಅಬ್ಬರದ ಪ್ರಚಾರ

ಬೆಂಗಳೂರು, ಅ.22-ಉಪ ಚುನಾವಣಾ ಮಹಾಸಮರದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಬಿಜೆಪಿಯ ಘಟಾನುಘಟಿ ನಾಯಕರು ಇಂದು ಅಬ್ಬರದ ಪ್ರಚಾರಕ್ಕೆ ಧುಮುಕಿದ್ದಾರೆ.

ಸುಡುವ ಬಿಸಿಲನ್ನೂ ಲೆಕ್ಕಿಸದೆ ಅಭ್ಯರ್ಥಿಗಳ ಗೆಲುವಿಗಾಗಿ ಪ್ರಮುಖ ನಾಯಕರು ಗಲ್ಲಿಗಲ್ಲಿ ಸುತ್ತುವ ಮೂಲಕ ಮತಬೇಟೆಯನ್ನು ಆರಂಭಿಸಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ತವರು ಜಿಲ್ಲೆಯಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಪರ ಇಂದು ಬಿರುಸಿನ ಪ್ರಚಾರ ನಡೆಸಿದರು. ಬಿ.ಎಸ್.ವೈ ಅವರಿಗೆ ಮಾಜಿ ಉಪ ಮುಖ್ಯಮಂತ್ರಿ ಶಾಸಕ ಕೆ.ಎಸ್.ಈಶ್ವರಪ್ಪ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕರಾದ ಕುಮಾರ ಬಂಗಾರಪ್ಪ, ಅರಗ ಜ್ಞಾನೇಂದ್ರ, ಅಶೋಕ್ ನಾಯಕ್ ಸೇರಿದಂತೆ ಮತ್ತಿತರರು ಸಾಥ್ ನೀಡಿದರು.

ಶಿವಮೊಗ್ಗದಾದ್ಯಂತ ಶಾಸಕರು, ಪಕ್ಷದ ಪ್ರಮುಖರು ಅಭ್ಯರ್ಥಿ ರಾಘವೇಂದ್ರ ಗೆಲುವಿಗೆ ಕ್ಷೇತ್ರ, ಹೋಬಳಿ ಮಟ್ಟದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶಗಳನ್ನು ನಡೆಸುವ ಮೂಲಕ ಮತಯಾಚನೆ ಮಾಡುತ್ತಿದ್ದಾರೆ.

ಗಣಿ ಜಿಲ್ಲೆ ಬಳ್ಳಾರಿಯಲ್ಲೂ ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಪರ ಇಂದು ಪ್ರಮುಖರು ಪ್ರಚಾರ ನಡೆಸುವ ಮೂಲಕ ದಸರಾ ಹಬ್ಬದ ನಂತರ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.
ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕರಾದ ಸೋಮಶೇಖರ ರೆಡ್ಡಿ, ವಿಧಾನ ಪರಿಷತ್ ಸದಸ್ಯ ರವಿ ಕುಮಾರ್, ಸಿ.ಟಿ.ರವಿ, ಹಡಗಲಿಯಲ್ಲಿ ಪ್ರಭು ಚೌಹಾಣ, ಕಂಪ್ಲಿಯಲ್ಲಿ ಅಮರನಾಥ ಪಾಟೀಲ್ ಸೇರಿದಂತೆ ಮತ್ತಿತರ ಮುಖಂಡರು ಬಿರುಸಿನ ಪ್ರಚಾರ ನಡೆಸಿದರು.
ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರಿಕಾಂತ್ ಕುಲಕರ್ಣಿ ಪರ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಸಂಗಮೇಶ್ ನಿರಾಣಿ ಸೇರಿದಂತೆ ಹಲವು ಪ್ರಮುಖರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಸ್ಪರ್ಧೆಯಿಂದ ರಾಜ್ಯದ ಗಮನ ಸೆಳೆದಿರುವ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಪರವಾಗಿ ಕೇಂದ್ರ ಸಚಿವ ಡಿ.ವಿ.ಸದಾನಂಗ ಗೌಡ, ಮುಖಂಡರಾದ ಸಿ.ಪಿ.ಯೋಗೇಶ್ವರ್, ರುದ್ರೇಶ್ ಸೇರಿದಂತೆ ಹಲವು ಪ್ರಮುಖರು ಕ್ಷೇತ್ರದಾದ್ಯಂತ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ.

ಸಕ್ಕರೆ ಜಿಲ್ಲೆ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಅವರ ಪರವಾಗಿ ಮುಖಂಡರಾದ ಆರ್.ಅಶೋಕ್, ಅಶ್ವಥ ನಾರಾಯಣ, ಸಂಸದ ಪ್ರತಾಪ್ ಸಿಂಹ ಮತ್ತಿತರ ನಾಯಕರು ಬೆಳಗ್ಗಿನಿಂದಲೇ ಮತಯಾಚನೆ ಮಾಡಿದ್ದಾರೆ.
ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಮೈಚಳಿ ಬಿಟ್ಟು ಪ್ರಚಾರದಲ್ಲಿ ತೊಡಗಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ