ಒಂದೇ ವೇದಿಕೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಜೆಡಿಎಸ್-ಕಾಂಗ್ರೆಸ್ ನಾಯಕರು

ಬೆಂಗಳೂರು, ಅ.22-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದಲ್ಲಿ ಅ.29 ರಂದು ಜೆಡಿಎಸ್-ಕಾಂಗ್ರೆಸ್‍ನ ನಾಯಕರು ಒಂದೇ ವೇದಿಕೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ತಿಳಿಸಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 29 ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಉಭಯ ಪಕ್ಷಗಳ ನಾಯಕರು ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಮಧುಬಂಗಾರಪ್ಪ ಪರವಾಗಿ ಮತ ಯಾಚನೆ ಮಾಡಲಿದ್ದಾರೆ ಎಂದರು.

ಶಿವಮೊಗ್ಗ ಸೇರಿದಂತೆ ಐದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಮೈತ್ರಿ ಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದರು.
ಶಿರಡಿ ಸಾಯಿಬಾಬಾ ದೇವಾಲಯದ ಪ್ರಸಾದವನ್ನು ವಿಶ್ವನಾಥ್ ಅವರಿಗೆ ಶರವಣ ನೀಡಿದರು. ಈ ಸಂದರ್ಭದಲ್ಲಿ ಬೆಂಗಳೂರು ನಗರ ಜೆಡಿಎಸ್ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ