ರಾಮನಗರದಲ್ಲಿ ಹೋಬಳಿವಾರು ಮುಖಂಡರ ಸಭೆ

ಬೆಂಗಳೂರು, ಅ.22- ಕಾಂಗ್ರೆಸ್- ಜೆಡಿಎಸ್ ಮೈತ್ರಿ ಕೂಟದ ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಹೋಬಳಿವಾರು ಮುಖಂಡರ ಸಭೆ ನಡೆಸಲಾಯಿತು.
ರಾಮನಗರ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ನಾಯಕರು ಹಾಗೂ ಮುಖಂಡರೊಂದಿಗೆ ಅಭ್ಯರ್ಥಿ ಹಾಗೂ ಮಾಜಿ ಶಾಸಕಿ ಅನಿತಾಕುಮಾರಸ್ವಾಮಿ ಸಭೆ ನಡೆಸಿದರು.

ಕ್ಷೇತ್ರದ ಕಸಬಾ ಹೋಬಳಿಯ ಕೆಂಪನಹಳ್ಳಿ, ಕೇತೋಹಳ್ಳಿ, ಸಂಗನಬಸವನದೊಡ್ಡಿ, ಅರಳೀಮರದದೊಡ್ಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮುಖಂಡರೊಂದಿಗೆ ಚರ್ಚಿಸಿದರು.

ನಿನ್ನೆ ರಾತ್ರಿ ಸಭೆ:
ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ರಾಮನಗರದ ಜೆಡಿಎಸ್-ಕಾಂಗ್ರೆಸ್ ನಾಯಕರು, ಮುಖಂಡರ ಸಭೆಯನ್ನು ನಿನ್ನೆ ರಾತ್ರಿ ನಡೆಸಿದ್ದು, ಮೈತ್ರಿ ಕೂಟದ ಅಭ್ಯರ್ಥಿ ಅನಿತಾಕುಮಾರಸ್ವಾಮಿ ಪರ ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಪ್ರಚಾರ ಕೈಗೊಳ್ಳಲು ನಿರ್ಧರಿಸಲಾಗಿದೆ.
ಈ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಕ್ಷೇತ್ರದ ಎಲ್ಲಾ ಹೋಬಳಿಗಳ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಚುನಾವಣಾ ಪ್ರಚಾರ ಮಾಡಬೇಕು ಹಾಗೂ ಅಧಿಕೃತ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಲು ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ವಿಧಾನಪರಿಷತ್‍ಸದಸ್ಯ ರವಿ, ಶಾಸಕ ಎ.ಮಂಜುನಾಥ್, ವಿಧಾನಪರಿಷತ್‍ನ ಮಾಜಿ ಸದಸ್ಯ ಇ.ಕೃಷ್ಣಪ್ಪ, ಇಕ್ಬಾಲ್‍ಹುಸೇನ್ ಸೇರಿದಂತೆ ಹಲವು ನಾಯಕರು, ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ಚುನಾವಣೆಯ ಕಾರ್ಯತಂತ್ರದ ಬಗ್ಗೆ ಉಭಯ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾಯಕರು ಮಾರ್ಗದರ್ಶನ ಮಾಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ