ಉಗ್ರಪ್ಪ ಪರವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಿಎಂ ಎಚ್.ಡಿ.ಕುಮಾರಸ್ವಾಮಿ ಚುನಾವಣಾ ಪ್ರಚಾರ

ಬೆಂಗಳೂರು, ಅ.28- ಬಳ್ಳಾರಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ಬಳ್ಳಾರಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷದ ಒಮ್ಮತದ ಅಭ್ಯರ್ಥಿಯಾಗಿ ವಿ.ಎಸ್.ಉಗ್ರಪ್ಪ ಅವರನ್ನು ಕಣಕ್ಕಿಳಿಸಲಾಗಿದ್ದು, ಉಭಯ ಪಕ್ಷಗಳ ನಾಯಕರು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲು ನಿರ್ಧರಿಸಲಾಗಿತ್ತು. ಅದರಂತೆ ದೇವೇಗೌಡರು ಮತ್ತು ಕುಮಾರಸ್ವಾಮಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಉಗ್ರಪ್ಪ ಪರವಾಗಿ ಮಾತನಾಡಲಿದ್ದಾರೆ.

ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಈಗಾಗಲೇ ಬಳ್ಳಾರಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಹಾಗೂ ಮಾಜಿ ಶಾಸಕಿ ಅನಿತಾಕುಮಾರಸ್ವಾಮಿ ಪರವಾಗಿ ಇದು ಮತಯಾಚನೆ ಮಾಡಿದ ದೇವೇಗೌಡರು ನಾಳೆ ಬಳ್ಳಾರಿ ಕ್ಷೇತ್ರದಲ್ಲಿ ಉಗ್ರಪ್ಪ ಅವರ ಪರವಾಗಿ ಮತಯಾಚಿಸಲಿದ್ದಾರೆ.

ಇಂದಿನಿಂದ ಮೂರು ದಿನಗಳ ಕಾಲ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿವಿಧ ಕಡೆಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿರುವ ಕುಮಾರಸ್ವಾಮಿ ಅವರು, ಅ.31ರಂದು ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಅವರ ಪರವಾಗಿ ಒಂದು ದಿನ ಚುನಾವಣಾ ಪ್ರಚಾರದಲ್ಲಿ ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ