ಸಮ್ಮಿಶ್ರ ಸರ್ಕಾರ ಉರುಳಬೇಕೆಂಬ ಬಿ.ಎಸ್.ಯಡಿಯೂರಪ್ಪ ಆಸೆ ಈಡೇರುವುದಿಲ್ಲ: ಸಚಿವ ಎಚ್.ಡಿ.ರೇವಣ್ಣ

ಬಳ್ಳಾರಿ, ಅ.28- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಬೀಳಬೇಕೆಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಸೆ ಈಡೇರುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಪತನಗೊಳ್ಳಲಿ ಎಂದು ಕಂಡ ಕಂಡ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾರೆ ಎಂದರು.
ಬಿಜೆಪಿಯಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಶಿವಮೊಗ್ಗದಲ್ಲಿ ಮಾಜಿ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸಲು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರೇ ಮುಂದಾಗಿದ್ದಾರೆ ಎಂದು ಆರೋಪಿಸಿದರು.

ನಮ್ಮದು ಕುಟುಂಬ ರಾಜಕಾರಣವೆಂದು ಯಡಿಯೂರಪ್ಪ ಹೇಳುತ್ತಿದ್ದಾರೆ. ಆದರೆ ಅವರೇನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ರೇವಣ್ಣ, ಈ ಉಪ ಚುನಾವಣೆಯಲ್ಲಿ ಯಡಿಯೂರಪ್ಪ ಅವರ ತಮ್ಮ ಮಗನ ಬದಲು ಬೇರೆ ಕಾರ್ಯಕರ್ತನೊಬ್ಬನ್ನು ಚುನಾವಣೆಯಲ್ಲಿ ನಿಲ್ಲಿಸಬಹುದಿತ್ತಲ್ಲವೇ ಎಂದರು.
ಟೀಕೆ ಮಾಡಲು ಬೇರೆ ವಿಷಯ ಇಲ್ಲದ ಕಾರಣ ತಮ್ಮ ಕುಟುಂಬದ ವಿರುದ್ಧ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಯಡಿಯೂರಪ್ಪ ಅವರ ಶಿಫಾರಸ್ಸಿನ ಮೇರೆಗೆ ಎಇಇ ವರ್ಗಾವಣೆ ಮಾಡಲಾಗಿದೆ. ಆದರೂ ವಿನಾಕಾರಣ ವರ್ಗಾವಣೆಯ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಹಾಗಿದ್ದರೆ ವರ್ಗಾವಣೆಗೆ ಎಷ್ಟು ಹಣ ನೀಡಿದ್ದಾರೆ ಎಂಬುದನ್ನು ಹೇಳಲಿ ಎಂದು ಸವಾಲು ಹಾಕಿದರು.
ನಂತರ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ