ಬೆಂಗಳೂರು, ಅ.29- ನವೆಂಬರ್ 3ರಂದು ನಡೆಯಲಿರುವ ಐದು ಕ್ಷೇತ್ರಗಳ ಉಪಚುನಾವಣೆ ರಂಗೇರಲಿದೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಈ ಉಪಚುನಾವಣೆ ಕಣದಲ್ಲಿ ಗೆಲುವಿಗಾಗಿ ರಾಜಕೀಯ ಪಕ್ಷಗಳ ಮುಖಂಡರು ನಾನಾ ಕಸರತ್ತು ನಡೆಸುತ್ತಿದ್ದಾರೆ. ಮತದಾರರ ಮನವೊಲಿಕೆಗೆ ಹಣದ ಥೈಲಿಯೇ ಹರಿಯುತ್ತಿದೆ. ಉಪಚುನಾವಣಾ ಕಣದಲ್ಲಿ ಕುರುಡು ಕಾಂಚಾಣ ಕುಣಿಯಲಾರಂಭಿಸಿದೆ.
ನಾಯಕರ ಪ್ರಚಾರದ ಅಬ್ಬರ ಇಂದು ಕೂಡ ಜೋರಾಗಿತ್ತು. ಮೂರು ಲೋಕಸಭಾ ಉಪಚುನಾವಣೆಯಲ್ಲಿ ನಾಯಕರುಗಳು ಬಿರುಸಿನ ಪ್ರಚಾರ ನಡೆಸಿದರು. ಶಿವಮೊಗ್ಗದ ಸೊರಬ, ತೀರ್ಥಹಳ್ಳಿ, ಸಾಗರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಬ್ಬರದ ಪ್ರಚಾರ ನಡೆಸಿ ತಮ್ಮ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಪರ ಮತ ಯಾಚಿಸಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದ ಕುಮಾರಸ್ವಾಮಿ, ಬಿಜೆಪಿ ವಿರುದ್ಧ ಹರಿಹಾಯ್ದರು.
ಮೈತ್ರಿ ಸರ್ಕಾರ ಐದು ವರ್ಷ ಸಂಪೂರ್ಣ ಆಡಳಿತ ನಡೆಸಲಿದೆ. ರಾಜ್ಯದ ಜನರಿಗೆ ಉತ್ತಮ ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಠಾನಗೊಳಿಸುತ್ತಿದೆ. ಯುವನಾಯಕ ಮಧು ಬಂಗಾರಪ್ಪ ಅವರನ್ನು ಕೈ ಹಿಡಿಯಬೇಕೆಂದು ಕುಮಾರಸ್ವಾಮಿ ಮತದಾರರಲ್ಲಿ ಮನವಿ ಮಾಡಿದರು.
ಅತ್ತ ಬಳ್ಳಾರಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಪರವಾಗಿ ಪ್ರಚಾರ ನಡೆಸಿದರು.
ಕಾಂಗ್ರೆಸ್-ಜೆಡಿಎಸ್ ಒಟ್ಟಿಗೆ ಪ್ರಚಾರ ನಡೆಸಿದ್ದರಿಂದ ಪ್ರಚಾರದ ಅಬ್ಬರ ಜೋರಾಗಿತ್ತು. ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ದೋಸ್ತಿ ಪಕ್ಷಗಳ ನಾಯಕರು ಬಿಜೆಪಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು.
2018ರ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರದ ಹಿನ್ನೆಲೆಯಲ್ಲಿ ಕೋಮುವಾದಿ ಪಕ್ಷವನ್ನು ದೂರವಿಡುವ ಹಿನ್ನೆಲೆಯಲ್ಲಿ ಜಾತ್ಯತೀತ ಪಕ್ಷಗಳು ಒಂದಾಗಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆ ಮಾಡಿದ್ದೇವೆ. ರಾಜಕೀಯ ದ ಎಲ್ಲ ಟೀಕೆಗಳನ್ನು ಮರೆತು ನಾವೆಲ್ಲ ಪ್ರಜಾಪ್ರಭುತ್ವದ ಉಳಿವಿಗೆ ಒಂದಾಗಿದ್ದೇವೆ. ನಮ್ಮ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಬೇಕು, ಕೋಮುವಾದಿ ಬಿಜೆಪಿಯನ್ನು ದೂರವಿಡಬೇಕು ಎಂದು ಮನವಿ ಮಾಡಿದರು.
ಜಮಖಂಡಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಪಕ್ಷದ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಪರ ಮತಯಾಚನೆ ಮಾಡಿದರು. ಕಾಂಗ್ರೆಸ್, ಜೆಡಿಎಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು. ಅನುಕೂಲಸಿಂಧು ರಾಜಕಾರಣ ಮಾಡುತ್ತಿರುವ ದೋಸ್ತಿ ಪಕ್ಷಗಳನ್ನು ಜನ ತಿರಸ್ಕರಿಸಬೇಕೆಂದು ಅವರು ಮನವಿ ಮಾಡಿದರು.
ಮೂರು ತಿಂಗಳ ಹಿಂದೆ ನಡೆದ ಚುನಾವಣೆಯಲ್ಲಿ ಪರಸ್ಪರ ಕಚ್ಚಾಟ ನಡೆಸುತ್ತಿದ್ದ ಈ ಪಕ್ಷಗಳು ಈಗ ಒಂದಾಗಿ ಸರ್ಕಾರ ರಚಿಸಿ ಮತ್ತೆ ಮೈತ್ರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಈ ಮೈತ್ರಿ ಬಹಳ ಕಾಲ ಉಳಿಯುವುದಿಲ್ಲ. ಉಪಚುನಾವಣೆ ಫಲಿತಾಂಶ ಬಂದ ಕೂಡಲೇ ಸರ್ಕಾರ ಪತನವಾಗುವುದು ಖಚಿತ. ಬಿಜೆಪಿ ಅಭ್ಯರ್ಥಿ ಕಳೆದ ಬಾರಿ ಅಲ್ಪ ಮತಗಳ ಅಂತರದಿಂದ ಸೋಲನುಭವಿಸಿದ್ದರು. ಈ ಬಾರಿ ಗೆಲ್ಲುವುದು ಖಚಿತ ಎಂದು ಹೇಳಿದರು.
ಹಾನಗಲ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರು ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಅವರು, ಗಣಿ ಹಗರಣದಲ್ಲಿ ಸಿಲುಕಿರುವ ಆನಂದ್ಸಿಂಗ್, ನಾಗೇಂದ್ರಬಾಬು ಅವರನ್ನು ಅಕ್ಕಪಕ್ಕದಲ್ಲಿಟ್ಟುಕೊಂಡು ಮಾತನಾಡುವ ನಿಮಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.
ನಾನು ಯಾವುದೇ ಅಕ್ರಮ ಗಣಿಗಾರಿಕೆ ಮಾಡಿಲ್ಲ. ನನ್ನ ವಿರುದ್ಧ ಆರೋಪ ಸಾಬೀತು ಮಾಡಲು ಸಾಧ್ಯವಾಗಿಲ್ಲ. ನನ್ನ ಬಳ್ಳಾರಿ ಜನ ನಮ್ಮ ಶಾಂತಾ ಅವರನ್ನು ಕೈಬಿಡುವುದಿಲ್ಲ ಎಂದು ಹೇಳಿದರು.
ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಅವರು ಮನೆ ಮನೆಗೆ ತೆರಳಿ ಮತ ಯಾಚನೆ ಮಾಡಿದರು. ಮಂಡ್ಯದಲ್ಲಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಪರ ಕಾಂಗ್ರೆಸ್, ಜೆಡಿಎಸ್ ಮುಖಂಡರು ಮತ ಯಾಚಿಸಿದರೆ, ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಪರವಾಗಿ ಕಾರ್ಯಕರ್ತರು ಮತಯಾಚನೆ ಮಾಡಿದರು.
ಚುನಾವಣೆಗೆ ಕೇವಲ ಐದು ದಿನಗಳು ಮಾತ್ರ ಬಾಕಿ ಇದ್ದು, ಚುನಾವಣಾ ಕಣ ರಂಗೇರತೊಡಗಿದೆ. ಪ್ರತಿಷ್ಠೆಗೆ ಬಿದ್ದಿರುವ ಪಕ್ಷಗಳು ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಹಣವನ್ನು ವ್ಯಯಿಸಲು ಮುಂದಾಗಿವೆ. ಚುನಾವಣಾ ಆಯೋಗ ಕೂಡ ಹದ್ದಿನ ಕಣ್ಣಿಟ್ಟು ಕಾಯುತ್ತಿದೆ.