ಬೆಂಗಳೂರು, ಅ.29-ಭ್ರಷ್ಟಾಚಾರ ನಿರ್ಮೂಲನಾ ಸಪ್ತಾಹ ಅಂಗವಾಗಿ ಇಂದು ವಿಧಾನಸೌಧದ ವಿವಿಧ ಸಚಿವಾಲಯಗಳ ಅಧಿಕಾರಿ, ಸಿಬ್ಬಂದಿಗಳಿಗೆ ಬೃಹತ್ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್‍ಭಾಸ್ಕರ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪ್ರಸಾದ್, ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಜುಂ ಪರ್ವೇಜ್, ಮುಖ್ಯಮಂತ್ರಿಗಳ ಸಲಹೆಗಾರ ವೆಂಕಟರಾವ್ ಮತ್ತಿತರರು ಉಪಸ್ಥಿತರಿದ್ದರು.
ನಮ್ಮ ದೇಶದ ಆರ್ಥಿಕ, ರಾಜಕೀಯ, ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರವು ಒಂದು ಪ್ರಮುಖ ಅಡಚಣೆಯಾಗಿದೆ ಎಂದು ನಾನು ನಂಬುತ್ತೇನೆ. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸರ್ಕಾರ ಮತ್ತು ನಾಗರಿಕರು , ಖಾಸಗಿ ವಲಯದಂತಹ ಎಲ್ಲಾ ಪಾಲುದಾರರು ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ನಾನು ನಂಬುತ್ತೇನೆ.
ಪ್ರತಿ ನಾಗರಿಕನು ಜಾಗರೂಕನಾಗಿದ್ದು, ಎಲ್ಲಾ ಸಮಯದಲ್ಲೂ ಉನ್ನತ ಗುಣಮಟ್ಟದ ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಬದ್ಧನಾಗಿರಬೇಕೆಂದು ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಬೆಂಬಲಿಸಬೇಕೆಂದು ನಾನು ಅರಿತಿದ್ದೇನೆ.
ಆದ್ದರಿಂದ ನಾನು ಪ್ರತಿಜ್ಞೆ ಮಾಡುತ್ತೇನೆ ಜೀವನದ ಎಲ್ಲಾ ಕ್ಷೇತ್ರಗಳಲ್ಲೂ ಪ್ರಾಮಾಣಿಕತೆ ಮತ್ತು ಕಾನೂನಿನ ನಿಯಮಗಳನ್ನು ಅನುಸರಿಸುತ್ತೇನೆ. ನಾನು ಲಂಚ ಪಡೆಯುವುದಿಲ್ಲ ಹಾಗೂ ನೀಡುವುದೂ ಇಲ್ಲ. ಎಲ್ಲಾ ಕಾರ್ಯಗಳನ್ನು ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ನಿರ್ವಹಿಸುತ್ತೇನೆ. ಸಾರ್ವಜನಿಕ ಹಿತಾಸಕ್ತಿಯಲ್ಲಿ ಕಾರ್ಯನಿರ್ವಹಿಸುತ್ತೇನೆ. ವೈಯಕ್ತಿಕ ನಡವಳಿಕೆಯಲ್ಲಿ ನಿಷ್ಠೆ ಪ್ರದರ್ಶಿಸುವ ಮೂಲಕ ಮಾದರಿಯಾಗುತ್ತೇನೆ. ಯಾವುದೇ ಭ್ರಷ್ಟಾಚಾರದ ಘಟನೆಯನ್ನು ಸೂಕ್ತ ಸಂಸ್ಥೆಗೆ ವರದಿ ಮಾಡುತ್ತೇನೆ ಎಂದು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.