ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ನ.24ರಂದು ಪ್ರೌಡಶಾಲಾ ಸಹ ಶಿಕ್ಷಕರ ಸಂಘದಿಂದ ಧರಣಿ

ಬೆಂಗಳೂರು, ಅ.30- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ನ.24ರಂದು ನಗರದ ಫ್ರೀಡಂಪಾರ್ಕ್‍ನಲ್ಲಿ ಧರಣಿ ನಡೆಸಲು ನಿರ್ಧರಿಸಿದೆ ಎಂದು ಸಂಘದ ಅಧ್ಯಕ್ಷ ಎಚ್.ಜಿ.ಮಂಜುನಾಥ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನುದಾನಿತ ಶಾಲಾ ಶಿಕ್ಷಕರಿಗೆ ಕಾಲ್ಪನಿಕ ವೇತನಕ್ಕೆ ಸಂಬಂಧಿಸಿದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರ ಅಧ್ಯಕ್ಷತೆಯಲ್ಲಿ ರಚನೆಗೊಂಡ ಸಮಿತಿಯು ನೀಡಿರುವ ವರದಿಯನ್ನು ಯಥಾವತ್ತಾಗಿ ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಸ್ನಾತಕೋತ್ತರ ಪದವಿ ಪಡೆದ ಪ್ರೌಢಶಾಲಾ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜು ಉಪನ್ಯಾಸಕರನ್ನಾಗಿ ಹಿಂದಿನ ನಿಯಮದನ್ವಯ 50ಃ50 ಅನುಪಾತದಲ್ಲಿ ಯಾವುದೇ ನಿಬಂಧನೆಗಳಿಗೆ ಒಳಪಡಿಸದೇ ಮುಂಬಡ್ತಿ ನೀಡುವುದು, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಆರಂಭಿಸುವುದು, ವರ್ಗಾವಣೆ ಪ್ರಕ್ರಿಯೆಯಲಿರುವ ನ್ಯೂನತೆಗಳನ್ನು ಸರಿಪಡಿಸಬೇಕು ಎಂಬುದು ಸೇರಿದಂತೆ 12 ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಮಲ್ಲಯ್ಯ, ವಿಭಾಗೀಯ ಸಹ ಕಾರ್ಯದರ್ಶಿ ಮಹದೇವಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಸಿದ್ದಯ್ಯಪೂಜಾರಿ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ