ಬೆಂಗಳೂರು, ಅ.30-ಮಾಜಿ ಉಪ ಪ್ರಧಾನಿ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ನಾಳೆ ನಗರದಲ್ಲಿ ಬಿಜೆಪಿ ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಏಕತೆಗಾಗಿ ಓಟ ನಡೆಯಲಿದ್ದು, ಐಟಿ ವಿಭಾಗದ ಇಂಜನಿಯರ್ಗಳು, ವೈದ್ಯರು, ಸಂಘ-ಸಂಸ್ಥೆಗಳು, ಕಾಲೇಜು ವಿದ್ಯಾರ್ಥಿಗಳು ಓಟದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ದೇಶದ ಏಕತೆಗಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕೊಡುಗೆ ಅನನ್ಯವಾದುದು. ಮುಂದಿನ ಪೀಳಿಗೆ ಅವರ ಕೊಡುಗೆಯನ್ನು ಸದಾ ಸ್ಮರಿಸಬೇಕೆಂಬ ಸದುದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಬೆಳಗ್ಗೆ 8ರಿಂದ 10ಗಂಟೆವರೆಗೆ ಏಕತೆಗಾಗಿ ಓಟ ನಡೆಯಲಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಮಾನ್ಯತಾ ಟೆಕ್ ಪಾರ್ಕ್ನಿಂದ ಆರಂಭಗೊಂಡು ಹೊರ ವರ್ತುಲ ರಸ್ತೆಯಲ್ಲಿ ಓಟ ಮುಕ್ತಾಯವಾಗಲಿದೆ. ಇದರಲ್ಲಿ ಶಾಸಕರಾದ ಡಾ.ಅಶ್ವಥನಾರಾಯಣ, ಡಾ.ವೈ.ಎ.ನಾರಾಯಣಸ್ವಾಮಿ, ಮಾಜಿ ಶಾಸಕ ಮುನಿರಾಜು ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಬೆಂಗಳೂರು ಕೇಂದ್ರದಲ್ಲಿ ಏಕತಾ ಓಟವು ಕಬ್ಬನ್ಪಾರ್ಕ್ ಮೆಟ್ರೋ ಸ್ಟೇಷನ್ನಿಂದ ಪ್ರಾರಂಭವಾಗಿ ವಸಂತನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ಭವನದವರೆಗೆ ನಡೆಯಲಿದೆ. ಇದರಲ್ಲಿ ಸಂಸದ ಪಿ.ಸಿ.ಮೋಹನ್, ಶಾಸಕರಾದ ಅರವಿಂದಲಿಂಬಾವಳಿ, ಸುರೇಶ್ಕುಮಾರ್, ರಘು ಮತ್ತಿತರರು ಭಾಗವಹಿಸಲಿದ್ದಾರೆ.
ಬೆಂಗಳೂರು ದಕ್ಷಿಣದ ಏಕತಾ ಓಟವು ಚಂದ್ರಗುಪ್ತ ಮೌರ್ಯ ಕ್ರೀಡಾಂಗಣದಿಂದ ಪ್ರಾರಂಭವಾಗಿ ಜಯನಗರ 11ನೇ ಮುಖ್ಯರಸ್ತೆಯಲ್ಲಿ ಮುಕ್ತಾಯವಾಗಲಿದೆ. ಶಾಸಕರಾದ ಆರ್.ಅಶೋಕ್, ಉದಯಗರುಡಾಚಾರ್, ರವಿಸುಬ್ರಹ್ಮಣ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ರಾಷ್ಟ್ರೀಯ ಏಕತಾ ದಿನಾಚರಣೆಗಾಗಿ ಶಾಲಾ-ಕಾಲೇಜುಗಳಲ್ಲಿ ಚರ್ಚಾ ಸ್ಪರ್ಧೆ ಮತ್ತಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಸದ ಪಿ.ಸಿ.ಮೋಹನ್, ಶಾಸಕರಾದ ಡಾ.ಅಶ್ವಥನಾರಾಯಣ, ವೈ.ಎ.ನಾರಾಯಣಸ್ವಾಮಿ, ಮಾಜಿ ಉಪ ಮೇಯರ್ ಎಸ್.ಹರೀಶ್, ಎ.ಎಚ್.ಆನಂದ್ ಉಪಸ್ಥಿತರಿದ್ದರು.