ಬೆಂಗಳೂರು,ನ.1-ಜಿದ್ದಾಜಿದ್ದಿನ ಕಣವಾಗಿದ್ದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಗುರುವಾರ ತೆರೆಬಿತ್ತು.
ಶನಿವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಶುಕ್ರವಾರ ಸೀಮಿತ ಸಂಖ್ಯೆಯಲ್ಲಿ ಮಾತ್ರ ಮನೆ ಮನೆಗೆ ತೆರಳಿ ಪ್ರಚಾರ ನಡೆಸಬಹುದೇ ಹೊರತು ಬಹಿರಂಗ ಸಮಾವೇಶವನ್ನು ನಡೆಸಲು ಅವಕಾಶವಿಲ್ಲ.
ರಾಮನಗರ ಬಿಜೆಪಿ ಅಭ್ಯರ್ಥಿಯಾಗಿದ್ದ ಎಲ್.ಚಂದ್ರಶೇಖರ್ ಚುನಾವಣಾ ಕಣದಿಂದ ನಿವೃತ್ತಿ ಹೊಂದುವುದಾಗಿ ಘೋಷಣೆ ಮಾಡುತ್ತಿದ್ದಂತೆ ಬಿಜೆಪಿ ಪಾಳೆಯದಲ್ಲಿ ಸೂತಕದ ಛಾಯೆ ಆವರಿಸಿತು.
ಮಂಡ್ಯ, ಶಿವಮೊಗ್ಗ, ಬಳ್ಳಾರಿ ಮತ್ತು ಜಮಖಂಡಿಯಲ್ಲಿ ಅಭ್ಯರ್ಥಿಗಳ ಪರ ಕೆಲವು ಪ್ರಮುಖರು ಪ್ರಚಾರ ನಡೆಸಿದರಾದರೂ ಹೇಳಿಕೊಳ್ಳುವಂತಹ ಉತ್ಸಾಹ ಇರಲಿಲ್ಲ.
ಶಿವಮೊಗ್ಗದಲ್ಲಿ ಬಿಜೆಪಿ ಅಧ್ಯಕ್ಷ ತಮ್ಮ ಪುತ್ರ ಬಿ.ವೈ.ರಾಘವೇಂದ್ರ ಪರ ಪ್ರಚಾರ ನಡೆಸಿದರೆ ಕೆ.ಎಸ್.ಈಶ್ವರಪ್ಪ, ವಿಧಾನಸಭಾ ಪರಿಷತ್ ಸದಸ್ಯ ರುದ್ರೇಗೌಡ ಮತ್ತಿತರ ನಾಯಕರು ಪ್ರಮುಖ ಕಡೆ ಪ್ರಚಾರ ನಡೆಸಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಜಮಖಂಡಿಯಲ್ಲಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಸಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಪರ ಮತಯಾಚನೆ ಮಾಡಿದರು. ಇನ್ನು ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮೇಗೌಡ ಪರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತಿತರರು ಮತ ಯಾಚಿಸಿದರು.
ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಜೆ.ಶಾಂತ ಪರ ಸಹೋದರ ರಾಮುಲು ಪಕ್ಷದ ಪ್ರಮುಖರ ಜೊತೆ ಮತಯಾಚಿಸಿದರೆ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ , ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಚಿತ್ರಣವನ್ನು ಜನತೆಯ ಮುಂದಿಟ್ಟರು.
ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಪರ ಆರ್. ಅಶೋಕ್ ಮತ ನೀಡುವಂತೆ ಜನತೆಯಲ್ಲಿ ಕೋರಿದರೆ, ಜೆಡಿಎಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಪರ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ಮತ ಯಾಚನೆ ಮಾಡಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಪತ್ನಿ ಅನಿತಾಕುಮಾರಸ್ವಾಮಿ ಪರ ರಾಮನಗರದಲ್ಲಿ ಮಧ್ಯಾಹ್ನ ರೋಡ್ ಶೋ ನಡೆಸುವ ಕಾರ್ಯಕ್ರ ಹಮ್ಮಿಕೊಂಡಿದ್ದರು. ಆದರೆ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಚುನಾವಣಾ ಕಣದಿಂದ ತಟಸ್ಥರಾದ ಹಿನ್ನೆಲೆಯಲ್ಲಿ ತಮ್ಮ ಕಾರ್ಯಕ್ರಮ ರದ್ದು ಮಾಡಿದರು.