
ಬೆಂಗಳೂರು,ನ.3- ಪಟಾಕಿ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕಾದ ಹಿನ್ನೆಲೆಯಲ್ಲಿ ಸರಣಿ ಸ್ಫೋಟಕ ಪಟಾಕಿಗಳನ್ನು ತಯಾರಿಸುವುದು ಮತ್ತು ಮಾರಾಟ ಮಾಡುವುದು ಹಾಗೂ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಿದೆ.
ಸ್ಫೋಟಕ ಪಟಾಕಿಗಳನ್ನು ಅಧಿಕೃತವಾಗಿ ಪರವಾನಗಿ ಪಡೆದ ಮಾರಾಟಗಾರರು ಮಾತ್ರ ಮಾರಾಟ ಮಾಡಬೇಕು. ದೀಪಾವಳಿ ಹಬ್ಬ ಸಂಬಂಧ 5ನೇ ತಾರೀಖು ಧನ ತೆರಾಸ್, 6ರಂದು ನರಕ ಚತುರ್ದಶಿ, 7 ರಂದು ದೀಪಾವಳಿ ಅಮಾವಾಸ್ಯೆ ಹಾಗೂ 8ರಂದು ಬಲಿಪಾಡ್ಯಮಿಯ ದಿನಗಳಲ್ಲಿ ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬಹುದಾಗಿದೆ(ಫೈರ್ ಕ್ರಾಕರ್ಸ್ ಹೊರತುಪಡಿಸಿ).
ಅಧಿಕೃತವಾಗಿ ಪರವಾನಗಿ ಪಡೆದವರು ಈ ಆದೇಶಾನುಸಾರ ಮಾತ್ರ ಮಾರಾಟ ಮಾಡಬೇಕು. ವಾರ್ತಾ ಮತ್ತು ಪ್ರಚಾರ ಇಲಾಖೆ ಮತ್ತು ಜಿಲ್ಲಾಡಳಿತದ ಎಲ್ಲಾ ಇಲಾಖೆಗಳು ಶಾಲಾ ಕಾಲೇಜುಗಳಲ್ಲಿ ಸಾರ್ವಜನಿಕರಲ್ಲಿ ಪಟಾಕಿ ಸಿಡಿಸುವುದರಿಂದ ಉಂಟಾಗುವ ಅಪಾಯಗಳ ಬಗ್ಗೆ ವ್ಯಾಪಕ ಪ್ರಚಾರ ನಡೆಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು 14 ದಿನಗಳ ಕಾಲ ಅಂದರೆ ದೀಪಾವಳಿ ಹಬ್ಬ ಪ್ರಾರಂಭವಾಗುವ ಏಳು ದಿನಗಳ ಮೊದಲು ಮತ್ತು ದೀಪಾವಳಿ ಹಬ್ಬದ ನಂತರ ಏಳು ದಿನಗಳು ಪಟಾಕಿ ಸಿಡಿಸುವುದರ ಬಗ್ಗೆ ಮೇಲ್ವಿಚಾರಣೆ ಮಾಡುವುದು, ಎಲ್ಲ ಮಹಾನಗರ ಪಾಲಿಕೆಗಳು, ಜಿಲ್ಲಾಡಳಿತ, ಜಿಪಂ, ತಾಪಂ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ, ಗ್ರಾಪಂ ವ್ಯಾಪ್ತಿಗಳಲ್ಲಿ ಸಾಮೂಹಿಕವಾಗಿ ಪಟಾಕಿ ಸಿಡಿಸುವ ಸಾಧ್ಯತೆಗಳನ್ನು ಪರಿಶೀಲಿಸಬೇಕೆಂದು ಸುತ್ತೋಲೆಯಲ್ಲಿ ಸೂಚಿಸಿದೆ.
ನಿಷೇಧಿತ ಸ್ಫೋಟಕ ಪಟಾಕಿ ಮಾರಾಟವನ್ನು ತಡೆಗಟ್ಟಲು ಕ್ರಮ ಕೈಗೊಳ್ಳದಿದ್ದರೆ ಸಂಬಂಧಿಸಿದ ಠಾಣಾಧಿಕಾರಿಗಳನ್ನು ನ್ಯಾಯಾಲಯದ ಆದೇಶದ ಉಲ್ಲಂಘನೆಗಾಗಿ ತಪ್ಪಿಸ್ಥರೆಂದು ನಿರ್ಧರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.