ಬೆಂಗಳೂರು, ನ.4- ಬೆಳಗಾವಿ ರೈತರಿಗೆ ಕೋಲ್ಕತ್ತಾ ನ್ಯಾಯಾಲಯ ವಾರೆಂಟ್ ಜಾರಿ ಮಾಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರೈತರ ತಂಟೆಗೆ ಬಾರದಂತೆ ಹುಷಾರ್ ಎಂದು ಪೊಲೀಸರಿಗೆ ಸೂಚಿಸಿದ್ದಾರೆ.
ಯಾವುದೇ ಕಾರಣಕ್ಕೂ ರೈತರನ್ನು ಬಂಧಿಸಬಾರದು, ರೈತರ ಹಿತಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಸಾಲ ಪಡೆದಿದ್ದ ರೈತರ ವಿರುದ್ಧ ಆಕ್ಸಿಸ್ ಬ್ಯಾಂಕ್ ಕೋಲ್ಕತ್ತಾ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದು, ಸಾಲ ಪಾವತಿಸದ ರೈತರ ವಿರುದ್ಧ ಬಂಧನದ ವಾರೆಂಟ್ ಹೊರಡಿಸಲಾಗಿರುವ ಮಾಹಿತಿ ಹೊರಬಿದ್ದ ಬೆನ್ನಲ್ಲೆ ಮುಖ್ಯಮಂತ್ರಿ ಈ ನಿರ್ದೇಶನ ನೀಡಿದ್ದಾರೆ.
ಇಂದು ಬೆಳಗ್ಗೆ ದೂರವಾಣಿ ಮೂಲಕ ಜಿಲ್ಲಾಧಿಕಾರಿ ಎಸ್.ಪಿ. ಬೊಮ್ಮನಹಳ್ಳಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ಕುಮಾರ್ ರೆಡ್ಡಿ ಅವರೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮೊದಲು ರೈತರ ಹಿತ ಕಾಪಾಡುವಂತೆ ನಿರ್ದೇಶಿಸಿದ್ದು, ಸರ್ಕಾರ ಈಗಾಗಲೇ ರೈತರ ಸಾಲ ಮನ್ನಾ ಮಾಡುವ ಪ್ರಕ್ರಿಯೆ ಆರಂಭಿಸಿರುವುದರಿಂದ ರೈತರನ್ನು ಬಂಧಿಸಬಾರದು. ಬಂಧನ ವಾರೆಂಟ್ಗೆ ಸಂಬಂಧಿಸಿದಂತೆ ಸಂಪೂರ್ಣವಾದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆಯೂ ಅವರು ಸೂಚಿಸಿದ್ದಾರೆ.
ಸಾಲ ಮನ್ನಾ ಯೋಜನೆ ವ್ಯಾಪ್ತಿಗೆ ಒಳಪಡುವ ರೈತರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ಅಂತಹ ರೈತರ ಬೆಂಬಲಕ್ಕೆ ಸರ್ಕಾರವಿದೆ ಅವರು ಅಭಯ ನೀಡಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಈಗಾಗಲೇ ಸಹಕಾರಿ ಬ್ಯಾಂಕು ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಮಾಡಿರುವ ಸಾಲವನ್ನು ಮನ್ನಾ ಮಾಡುವ ನಿರ್ಧಾರ ಕೈಗೊಂಡಿರುವ ಸರ್ಕಾರ, ರೈತರ ಸಾಲದ ಮಾಹಿತಿಯನ್ನು ಒದಗಿಸುವಂತೆ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಿಗೆ ಕೋರಿದೆ. ಪ್ರತಿ ತಿಂಗಳು ಸರ್ಕಾರದ ವತಿಯಿಂದ ರೈತರ ಸಾಲದ ಮೊತ್ತ ಪಾವತಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇದೇ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಕೆಲವು ರೈತರಿಗೆ ಆಕ್ಸಿಸ್ ಬ್ಯಾಂಕ್ ಬಂಧನದ ವಾರೆಂಟ್ ಹೊರಡಿಸಿದ್ದು, ರೈತರ ಆತಂಕದಲ್ಲಿ ಕಾಲ ನೂಕುವಂತಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಮೇಲಿನಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಮಧ್ಯೆ ರಾಜ್ಯ ರೈತ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಸರ್ಕಾರ ರೈತರ ಸಾಲಮನ್ನಾ ಮಾಡಿದ್ದರೂ ಆಕ್ಸಿಸ್ ಬ್ಯಾಂಕ್ ಅಧಿಕಾರಿಗಳು ನ್ಯಾಯಾಲಯದ ಮೊರೆ ಹೋಗಿರುವುದು ಸರಿಯಲ್ಲ. ನಾಳೆ ಎಲ್ಲಾ ಆಕ್ಸಿಸ್ ಬ್ಯಾಂಕ್ಗಳ ಕಚೇರಿ ಮುಂಭಾಗ ಧರಣಿ ನಡೆಸುವುದಾಗಿ ಎಚ್ಚರಿಸಿದರು.
ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಶಾಸಕ ಸಿ.ಟಿ.ರವಿ, ಮುಖ್ಯಮಂತ್ರಿ ಕುಮಾರಸ್ವಾಮಿ ಕೇವಲ ಪೇಪರ್ ಹೇಳಿಕೆ ಕೊಟ್ಟರೆ ಸಾಲದು. ಕೂಡಲೇ ಮುಖ್ಯ ಕಾರ್ಯದರ್ಶಿ ಅವರ ಮೂಲಕ ಆದೇಶ ಹೊರಡಿಸಿ ರೈತರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ.