ಬೆಂಗಳೂರು, ನ.6-ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ಮೂಲಕ ಮಂಡ್ಯ ಜಿಲ್ಲೆ ಜೆಡಿಎಸ್ನ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿತ್ತು. ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಅವರು ಪ್ರಚಂಡ ಬಹುಮತದ ಮೂಲಕ ಜಯಗಳಿಸಿದ್ದಾರೆ. ಇದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಾಯಕತ್ವಕ್ಕೆ ಜನ ನೀಡಿರುವ ಆಶೀರ್ವಾದವಾಗಿದೆ ಎಂದರು.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲೂ ಒಟ್ಟಾರೆ ಜೆಡಿಎಸ್ 2,80,000 ಮತಗಳ ಮುನ್ನಡೆ ಗಳಿಸಿತ್ತು. ಅದೇ ರೀತಿ ಈ ಚುನಾವಣೆಯಲ್ಲೂ ಮತದಾರರು ಜೆಡಿಎಸ್ಗೆ ಪ್ರಚಂಡ ಗೆಲುವು ನೀಡಿದ್ದು, ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.