ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‍ನೊಂದಿಗಿನ ಮೈತ್ರಿ ಮುಂದುವರೆಯಲಿದೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು, ನ.6-ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‍ನೊಂದಿಗಿನ ಮೈತ್ರಿ ಮುಂದುವರೆಯಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉಭಯ ಪಕ್ಷಗಳ ನಡುವೆ ಟಿಕೆಟ್ ಹಂಚಿಕೆಯನ್ನು ಅಂತಿಮಗೊಳಿಸಲಾಗುತ್ತದೆ ಎಂದು ಹೇಳಿದರು.

ಗುಂಡ್ಲುಪೇಟೆ -ನಂಜನಗೂಡು ಉಪಚುನಾವಣೆಗಳಿರಬಹುದು, ಬಿಬಿಎಂಪಿ ಇರಬಹುದು ಎಲ್ಲದರಲ್ಲೂ ಜೆಡಿಎಸ್-ಕಾಂಗ್ರೆಸ್ ಜೊತೆಗೂಡಿದೆ. ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಬಗ್ಗೆ ಯಾವುದೇ ರೀತಿ ಮಾತನಾಡಿದ್ದರು, ನಮ್ಮ ಬಗ್ಗೆ ಕಾಂಗ್ರೆಸ್‍ನವರು ಏನೇ ಮಾತನಾಡಿದ್ದರೂ ಅದನ್ನೆಲ್ಲ ಮರೆತು ಒಗ್ಗೂಡಿದ್ದೇವೆ. ಮುಂಬರುವ ಲೋಕಸಭೆ ಚುನಾವಣೆ ತಮ್ಮ ಬದುಕಿನ ಕೊನೆಯ ಹೋರಾಟವಾಗಿದೆ ಎಂದ ಅವರು, ಬಳ್ಳಾರಿ ಬಿಜೆಪಿಯ ಭದ್ರಕೋಟೆ ಎಂದು ಪರಿಗಣಿಸಿದ್ದರು, ಈ ಉಪಚುನಾವಣೆಯಲ್ಲಿ ಏನಾಯಿತು ಎಂದು ಪ್ರಶ್ನಿಸಿದರು.

ಹಳೆಯ ಭಿನ್ನಾಭಿಪ್ರಾಯ ಮರೆತು ಕಾಂಗ್ರೆಸ್-ಜೆಡಿಎಸ್ ಒಟ್ಟಾಗಿ ಕೆಲಸ ಮಾಡುತ್ತೇವೆ. ಕಾಂಗ್ರೆಸ್-ಜೆಡಿಎಸ್‍ನ ಎಲ್ಲಾ ಮುಖಂಡರು, ಕಾರ್ಯಕರ್ತರು ಜೊತೆಗೂಡಿ ಒಟ್ಟಾಗಿ ಕೆಲಸ ಮಾಡಿದ್ದರಿಂದ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೇವೆ, ಇದಕ್ಕಾಗಿ ಮತದಾರರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಡೆಯ ಘಳಿಗೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಯಿತು. ಮೊದಲೇ ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದರೆ ಗೆಲ್ಲುವ ಅವಕಾಶವಿತ್ತು. ಆದರೂ ಗೆಲುವಿನ ಅಂತರ 50 ಸಾವಿರಕ್ಕೆ ಇಳಿದಿರುವುದನ್ನು ಒಪ್ಪುತ್ತೇನೆ ಎಂದು ಹೇಳಿದರು.

ಸಂಪುಟ ವಿಸ್ತರಣೆ ವಿಳಂಬವಿಲ್ಲ:
ಜೆಡಿಎಸ್, ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವುದಿಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ವೇಣುಗೋಪಾಲ್ ಬೆಂಗಳೂರಿಗೆ ಬಂದಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ, ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ನಾಯಕರೊಂದಿಗೆ ಮಾತನಾಡಿ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ನಿಗಮ ಮಂಡಳಿಗಳ ನೇಮಕವನ್ನೂ ಸಹ ಶೀಘ್ರದಲ್ಲೇ ಮಾಡಲಾಗುವುದು ಎಂದರು.
ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರೀ ಬಹುಮತದಿಂದ ಗೆಲುವು ಸಾಧಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಇದೇ ಸಮಯದಲ್ಲಿ ದೇವೇಗೌಡರ ಆಶೀರ್ವಾದ ಪಡೆದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ