ಬೆಂಗಳೂರು, ನ.6- ರಾಜ್ಯದ ಮೂರು ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಸಮ್ಮಿಶ್ರ ಸರ್ಕಾರವನ್ನು ಜನತೆ ಬೆಂಬಲಿಸಿದ್ದು, ಈ ಮೂಲಕ ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಉಪ ಚುನಾವಣೆಗಳ ಫಲಿತಾಂಶದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ನಾವು ಈ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆದ್ದಿದ್ದೇವೆ ಎಂದು ಬೀಗುವುದಿಲ್ಲ. ಜನ ನಮಗೆ ಮನ್ನಣೆ ನೀಡಿರುವುದು ನಮ್ಮ ಜವಾಬ್ದಾರಿ ಹೆಚ್ಚಿಸಿದ್ದಾರೆ ಎಂದು ತಿಳಿದಿದ್ದೇವೆ. ಪ್ರತಿ ಪಕ್ಷ ಬಿಜೆಪಿ ಮೈತ್ರಿ ಸರ್ಕಾರ ಅಪವಿತ್ರ, ಅಭದ್ರ ಎಂದು ಹೇಳುತ್ತಿತ್ತು. ಈ ಫಲಿತಾಂಶ ಅವರ ಆರೋಪಗಳಿಗೆ ತಕ್ಕ ಉತ್ತರ ನೀಡಿದೆ ಎಂದು ಪ್ರತಿಕ್ರಿಯಿಸಿದರು.
2 ವಿಧಾನಸಭೆ, 2 ಲೋಕಸಭೆಯ ಉಪಚುನಾವಣೆಯಲ್ಲಿ ದೋಸ್ತಿ ಅಭ್ಯರ್ಥಿಗಳ ಗೆಲುವು, ಶಿವಮೊಗ್ಗ ಕ್ಷೇತ್ರದಲ್ಲಿ ಕಡಿಮೆ ಅಂತರದ ಸೋಲು ನಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ. ಬಿಜೆಪಿ ಪಕ್ಷದ ಅಪವಿತ್ರ ಮೈತ್ರಿ ಎಂಬ ಹೇಳಿಕೆಯನ್ನು ಜನತೆ ತಿರಸ್ಕರಿಸಿ ಈ ಫಲಿತಾಂಶದ ಮೂಲಕ ಉತ್ತರ ಕೊಟ್ಟಿದ್ದಾರೆ ಎಂದು ಕುಮಾರಸ್ವಾಮಿ ವ್ಯಾಖ್ಯಾನಿಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳಲಿವೆ. ಯಾವ ಯಾವ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ಚರ್ಚೆ ನಡೆಸಿದ್ದೇವೆ. ಎಲ್ಲಾ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು ಎಂಬ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ಕೆಲಸ ಮಾಡಲಿದ್ದೇವೆ ಎಂದು ಹೇಳಿದರು.