ಉಪ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆ ಹಿನ್ನಲೆ ಬಿಜೆಪಿ ವರಿಷ್ಟರಿಂದ ಮೇಜರ್ ಸಜ೵ರಿ:

ಬೆಂಗಳೂರು, ನ.7-ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು ಮೇಜರ್ ಸರ್ಜರಿ ನಡೆಸಲು ತೀರ್ಮಾನಿಸಿದ್ದಾರೆ.
ರಾಜ್ಯ ಘಟಕದ ಅಧ್ಯಕ್ಷರು, ರಾಜ್ಯ ಉಸ್ತುವಾರಿ, ಜಿಲ್ಲಾಧ್ಯಕ್ಷರು ಸೇರಿದಂತೆ ಕೆಲವು ಪದಾಧಿಕಾರಿಗಳನ್ನು ಬದಲಾವಣೆ ಮಾಡುವ ಬಗ್ಗೆ ರಾಷ್ಟ್ರೀಯ ನಾಯಕರು ಗಂಭೀರ ಚಿಂತನೆ ನಡೆಸಿದ್ದಾರೆ.

ಆದರೆ ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿದರೆ ಆಗಬಹುದಾದ ಅನುಕೂಲ ಮತ್ತು ಅನಾನುಕೂಲಗಳ ಬಗ್ಗೆಯೂ ಕೇಂದ್ರ ನಾಯಕರು ಇಕ್ಕಟ್ಟಿಗೆ ಸಿಲುಕಿದ್ದಾರೆ.
ಯಡಿಯೂರಪ್ಪನವರನ್ನು ಬದಲಾಯಿಸಿದರೆ ಪಕ್ಷಕ್ಕೆ ಬೆನ್ನೆಲುಬಾಗಿರುವ ಲಿಂಗಾಯತ ಸಮುದಾಯ ಲೋಕಸಭೆ ಚುನಾವಣೆಯಲ್ಲಿ ಕೈ ಕೊಟ್ಟರೆ ಹೆಚ್ಚಿನ ಸ್ಥಾನ ಗಳಿಸಲು ಸಾಧ್ಯವಾಗುವುದಿಲ್ಲ. ಒಂದು ವೇಳೆ ಅವರನ್ನೇ ಮುಂದುವರೆಸಿದರೂ ಅವರ ವಿರೋಧಿ ಬಣ ತಟಸ್ಥರಾಗುವುದರಿಂದ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂಬ ಆತಂಕ ಎದುರಾಗಿದೆ.

ನಿನ್ನೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಅವರಿಂದ ಸಮಗ್ರ ಮಾಹಿತಿ ಪಡೆದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಫಲಿತಾಂಶದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಇಷ್ಟೊಂದು ಪ್ರಬಲವಾಗಿದ್ದ ಸಂದರ್ಭದಲ್ಲಿ ಕಳಪೆ ಸಾಧನೆಗೆ ಕಾರಣ ಏನೆಂಬುದನ್ನು ವರದಿ ರೂಪದಲ್ಲಿ ನೀಡಬೇಕೆಂದು ಸೂಚಿಸಿದ್ದಾರೆ. ಕರ್ನಾಟಕದ ಫಲಿತಾಂಶ ನಮಗೆ ಅತ್ಯಂತ ಅಸಮಾಧಾನ ತಂದಿದೆ. ಬಿಜೆಪಿಯ ಭದ್ರ ಕೋಟೆ ಎನಿಸಿದ್ದ ಯಡಿಯೂರಪ್ಪನವರ ತವರು ಜಿಲ್ಲೆ ಶಿವಮೊಗ್ಗದಲ್ಲೇ ಬಿಜೆಪಿ ಅಭ್ಯರ್ಥಿ ಪ್ರಯಾಸದ ಗೆಲುವು ಕಂಡಿದ್ದಾರೆ. ಸತತ ಮೂರು ಬಾರಿ ಗೆದ್ದಿದ್ದ ಬಳ್ಳಾರಿಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಅತ್ಯಂತ ಹೀನಾಯವಾಗಿ ಸೋಲಲು ಕಾರಣವೇನು? ನಾಯಕರ ಒಳಜಗಳ, ಮುನಿಸು, ಅಸಹಕಾರದಿಂದ ಪಕ್ಷದ ಮೇಲೆ ಪರಿಣಾಮ ಬೀರಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ನಾವು ಕರ್ನಾಟಕದಿಂದ ಹೆಚ್ಚು ಸ್ಥಾನಗಳನ್ನು ನಿರೀಕ್ಷಿಸಿದ್ದೆವು. ಈಗ ನಮ್ಮ ಗುರಿಯನ್ನು ತಲುಪಲು ಸಾಧ್ಯವೇ ಎಂದು ಮುರಳೀಧರ್ ರಾವ್‍ಗೆ ಅಮಿತ್‍ಷಾ ಪ್ರಶ್ನೆ ಮಾಡಿದ್ದಾರೆ.

ಅಧ್ಯಕ್ಷರನ್ನು ಬದಲಿಸಿ:
ಈ ಬೆಳವಣಿಗೆಗಳ ನಡುವೆಯೇ ಯಡಿಯೂರಪ್ಪನವರ ವಿರೋಧಿ ಬಣ ರಾಜ್ಯಾಧ್ಯಕ್ಷ ಸ್ಥಾನವನ್ನು ಸೂಕ್ತವಾದ ಹಾಗೂ ಆರ್‍ಎಸ್‍ಎಸ್ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಬೇಕೆಂದು ಕೇಂದ್ರ ನಾಯಕರ ಮೇಲೆ ಒತ್ತಡದ ತಂತ್ರ ಅನುಸರಿಸಿದ್ದಾರೆ.
ಪಕ್ಷದ ಸಂವಿಧಾನದ ಪ್ರಕಾರ ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಎನ್ನುವಂತೆ ಯಡಿಯೂರಪ್ಪನವರು ಅಧ್ಯಕ್ಷ ಸ್ಥಾನದ ಜೊತೆಗೆ ವಿಧಾನಸಭೆ ಪ್ರತಿಪಕ್ಷದ ನಾಯಕರೂ ಆಗಿದ್ದಾರೆ. ಅವರು ಎರಡು ಸ್ಥಾನಗಳನ್ನು ನಿರ್ವಹಣೆ ಮಾಡುತ್ತಿರುವುದರಿಂದ ಪಕ್ಷ ಸಂಘಟನೆಗೆ ಒತ್ತು ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಲೋಕಸಭೆ ಚುನಾವಣೆ ಗಮನದಲ್ಲಿರಿಸಿಕೊಂಡು ಸೂಕ್ತವಾದವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವಂತೆ ಕೇಂದ್ರ ನಾಯಕರಿಗೆ ಒತ್ತಡ ಹಾಕಿದ್ದಾರೆ.

ಉಸ್ತುವಾರಿಯನ್ನೂ ಬದಲಿಸಿ:
ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್‍ರಾವ್ ಕೂಡ ಯಡಿಯೂರಪ್ಪನವರ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ. ಅವರು ಸ್ವತಂತ್ರರಾಗಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಯಡಿಯೂರಪ್ಪ ಹೇಳಿದಂತೆ ಮುರಳೀಧರ್ ರಾವ್ ಕಾರ್ಯನಿರ್ವಹಿಸುತ್ತಿರುವುದರಿಂದ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನ, ಭಿನ್ನಮತ ಯಾವುದೂ ಕೂಡ ಶಮನವಾಗಿಲ್ಲ. ಪಕ್ಷಕ್ಕೆ ದುಡಿದವರನ್ನು ಕಡೆಗಣಿಸಿ ಯಡಿಯೂರಪ್ಪನವರ ಹಿಂಬಾಲಕರಿಗೆ ಸ್ಥಾನಮಾನ ನೀಡಲಾಗುತ್ತಿದೆ. ಇದರಿಂದ ನಿಷ್ಠಾವಂತರು ಪಕ್ಷದಿಂದ ವಿಮುಖರಾಗುತ್ತಿದ್ದಾರೆ. ಕೂಡಲೇ ಉಸ್ತುವಾರಿಯನ್ನೂ ಸಹ ಬದಲಿಸುವಂತೆ ಕೆಲವರು ಒತ್ತಡ ಹಾಕುತ್ತಿದ್ದಾರೆ.

ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರದ ವರಿಷ್ಠರು ಸದ್ಯದಲ್ಲೇ ರಾಜ್ಯ ಘಟಕಕ್ಕೆ ಮೇಜರ್ ಸರ್ಜರಿ ಮಾಡುವ ಮುನ್ಸೂಚನೆಯನ್ನು ನೀಡಿದ್ದಾರೆಂದು ತಿಳಿದುಬಂದಿದೆ.

ಸ್ಥಳೀಯ ನಾಯಕರಲ್ಲಿ ಹೊಂದಾಣಿಕೆ ಕಂಡುಬಾರದಿರುವುದು, ಪರಸ್ಪರ ಒಬ್ಬರ ವಿರುದ್ಧ ಮತ್ತೊಬ್ಬರು ಕತ್ತಿ ಮಸಿಯುತ್ತಿರುವುದರಿಂದಲೇ ಸೋಲು ಉಂಟಾಗಿದೆ ಎಂಬುದು ಕೇಂದ್ರ ನಾಯಕರಿಗೆ ಮನವರಿಕೆಯಾಗಿದೆ. ಹೀಗಾಗಿ ಕೆಲವು ಮಹತ್ವದ ಹುದ್ದೆಗಳನ್ನು ಬದಲಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇನ್ನು ಪದಾಧಿಕಾರಿಗಳ ನೇಮಕಾತಿಯಲ್ಲೂ ಅಸಮಾಧಾನ ಇರುವ ಕಾರಣ ಕೆಲವು ಕಡೆ ಹಿರಿಯ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿ, ಜಿಲ್ಲಾಧ್ಯಕ್ಷರುಗಳು ಬದಲಾವಣೆಯಾಗುವ ಸಾಧ್ಯತೆ ಇದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ