ಬೆಂಗಳೂರು, ನ.9- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೇ ಆಗಲಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಕಾಂಗ್ರೆಸ್-ಜೆಡಿಎಸ್ ನಾಯಕರು ಚರ್ಚಿಸಿ ಸಂಪುಟ ವಿಸ್ತರಣೆಗೆ ಕ್ರಮ ಕೈಗೊಳ್ಳಲಿದ್ದಾರೆ. ಆದಷ್ಟು ಶೀಘ್ರವಾಗಿ ಸಂಪುಟ ವಿಸ್ತರಣೆಯಾದರೆ ಒಳ್ಳೆಯದು ಎಂದರು.
ತಮಗೆ ಮಂತ್ರಿಗಿರಿಗಿಂತ ಪಕ್ಷ ಮುಖ್ಯ, ಮೊದಲು ಪಕ್ಷ. ಆನಂತರ ಸಚಿವ ಸ್ಥಾನ ಎಂದ ಅವರು, ಲೋಕಸಭೆಯಲ್ಲಿ ಹೆಚ್ಚು ಸ್ಥಾನವನ್ನು ಪಕ್ಷ ಗಳಿಸಬೇಕಿದೆ. ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಯವರು ಯಾವುದೇ ಜವಾಬ್ದಾರಿ ನೀಡಿದರೂ ನಿರ್ವಹಿಸಲು ಸಿದ್ದ ಎಂದು ಹೇಳಿದರು.
ಟಿಪ್ಪು ಜಯಂತಿ ವಿರೋಧಿಸುವ ಬದಲು ಪ್ರತಿಪಕ್ಷಗಳು ಸಹಕಾರ ನೀಡಬೇಕು. ಬೇರೆ ಬೇರೆ ಗಣ್ಯರ ಜಯಂತಿಗಳು ನಡೆಯುವ ರೀತಿಯಲ್ಲೇ ಟಿಪ್ಪು ಜಯಂತಿ ಆಚರಣೆ ನಡೆಯುತ್ತಿದೆ. ಈ ವಿಚಾರದಲ್ಲಿ ಸಣ್ಣತನಕ್ಕೆ ಹೋಗಬಾರದು. ಪ್ರತಿಪಕ್ಷಗಳು ಸಹಕಾರ ನೀಡಬೇಕು ಎಂದರು.
ತಾವು ಹಾಸನದಲ್ಲಿ ನಡೆಯುವ ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ ಅವರು, ಮುಖ್ಯಮಂತ್ರಿಗಳು ವಿಶ್ರಾಂತಿ ಪಡೆಯುತ್ತಿರುವುದರಿಂದ ಟಿಪ್ಪು ಜಯಂತಿಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ರೇವಣ್ಣ ತಿಳಿಸಿದರು.
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಹಿರಿಯ ಅನುಭವಿಗಳಾಗಿದ್ದು, ಅವರ ಮಾರ್ಗದರ್ಶನ ಬೇಕಾಗಿದೆ. ಅವರಿಗೆ ಅಧಿಕಾರ ನೀಡಲು ನಮ್ಮ ಅಭ್ಯಂತರವಿಲ್ಲ ಎಂದರು.