ಡಿಸೆಂಬರ್‍ನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಮಂಡಲ ಅಧಿವೇಶನ: ಪೂರ್ವ ಸಿದ್ದತೆ ಬಗ್ಗೆ ನ.19ರಂದು ಪರಿಶೀಲನೆ

ಬೆಂಗಳೂರು, ನ.11- ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್‍ನಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನದ ಪೂರ್ವ ಸಿದ್ದತೆ ಬಗ್ಗೆ ವಿಧಾನಸಭೆ ಸಭಾಧ್ಯಕ್ಷ ರಮೇಶ್‍ಕುಮಾರ್ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜಹೊರಟ್ಟಿ ನ.19ರಂದು ಪರಿಶೀಲನೆ ನಡೆಸಲಿದ್ದಾರೆ.

ಅಧಿವೇಶನಕ್ಕೆ ಅಗತ್ಯವಿರುವ ಪೂರ್ವ ಸಿದ್ದತೆ ಬಗ್ಗೆ ಸಭಾಪತಿ ಮತ್ತು ಸಭಾಧ್ಯಕ್ಷರು ಜಿಲ್ಲಾಡಳಿತದೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಅಗತ್ಯವಿರುವ ವಸತಿ, ಊಟೋಪಚಾರ, ಭದ್ರತೆ ಸೇರಿದಂತೆ ಸಿದ್ದತೆಗಳ ಬಗ್ಗೆ ಜಿಲ್ಲಾಡಳಿತದಿಂದ ಮಾಹಿತಿ ಪಡೆಯಲಿದ್ದಾರೆ.
ಚಳಿಗಾಲದ ಅಧಿವೇಶನವನ್ನು ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ನಡೆಸುತ್ತಾ ಬಂದಿದೆ. ಈ ಬಾರಿಯೂ ಸುಮಾರು 10 ದಿನಗಳ ಕಾಲ ಸುವರ್ಣ ವಿಧಾನಸೌಧದಲ್ಲಿ ಉಭಯ ಸದನಗಳ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ.

ಡಿಸೆಂಬರ್ ಮೊದಲ ವಾರದಲ್ಲಿ ಅಧಿವೇಶನ ಪ್ರಾರಂಭವಾಗುವ ಸಾಧ್ಯತೆಗಳಿದ್ದು, ಮುಂದಿನ ಸಚಿವ ಸಂಪುಟಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಗಳಿವೆ.

ಪ್ರತಿ ವರ್ಷವೂ ರಾಜ್ಯ ಸರ್ಕಾರ ನವೆಂಬರ್ ಅಥವಾ ಡಿಸೆಂಬರ್‍ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸುತ್ತಾ ಬಂದಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮೊದಲ ಬಾರಿಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಿದ್ದರು.
ಈ ಬಾರಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದು, ಬೆಳಗಾವಿ ಅಧಿವೇಶನ ಹೆಚ್ಚಿನ ಮಹತ್ವ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ