ಬೆಂಗಳೂರು, ನ.12-ಕೇಂದ್ರ ಸಚಿವ ಅನಂತ್ಕುಮಾರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆ ಘೋಷಣೆ ಮಾಡಿದ್ದು, ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ಒಂದು ದಿನ ರಜೆ ನೀಡಲಾಗಿದೆ.
ಇಂದು ಮುಂಜಾನೆ ಅನಂತ್ಕುಮಾರ್ ಅವರು ಅನಾರೋಗ್ಯದಿಂದ ನಿಧನರಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನ್ನ ಎಲ್ಲಾ ಅಧಿಕೃತ ಕಾರ್ಯಕಲಾಪಗಳನ್ನು ರದ್ದು ಮಾಡಿದೆ.
ದಿವಂಗತರ ಗೌರವಾರ್ಥವಾಗಿ ಎಲ್ಲಾ ಸರ್ಕಾರಿ ಕಚೇರಿಗಳಿಗೆ, ಖಾಸಗಿ ಹಾಗೂ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಇಂದಿನಿಂದ ನ.14ರವರೆಗೆ ರಾಜ್ಯಾದ್ಯಂತ ಶೋಕಾಚರಣೆ ಆಚರಿಸಲಾಗುತ್ತಿದೆ. ಈ ಅವಧಿಯಲ್ಲಿ ಯಾವುದೇ ಅಧಿಕೃತ ಸಭೆ, ಸಮಾರಂಭಗಳಿರುವುದಿಲ್ಲ. ಸಾರ್ವಜನಿಕ ಹಾಗೂ ಮನರಂಜನಾ ಕಾರ್ಯಕ್ರಮಗಳಿರುವುದಿಲ್ಲ. ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಿ ಶ್ರದ್ದಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.
ಇದರ ಬೆನ್ನಲ್ಲೇ ಇಂದು ನಡೆಯಬೇಕಿದ್ದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ಆನ್ಲೈನ್ ಸೇವೆಗಳ ಉದ್ಘಾಟನೆಯನ್ನು ಮುಂದೂಡಲಾಗಿದೆ.
ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರ ಪತ್ರಿಕಾಗೋಷ್ಠಿ ಸೇರಿದಂತೆ ಅನೇಕ ಕಾರ್ಯಕ್ರಮಗಳು ಮುಂದೂಡಿಕೆಯಾಗಿವೆ.