ನಾಳೆ ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿರುವ ಕೇಂದ್ರದ ತಂಡ

ಬೆಂಗಳೂರು,ನ.18-ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಬರಪೀಡಿತ ಪ್ರದೇಶಗಳ ಅಧ್ಯಯನ ಕೈಗೊಂಡಿರುವ ಕೇಂದ್ರದ ತಂಡ ನಾಳೆ ಮಧ್ಯಾಹ್ನ ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

ವಿಧಾನಸೌಧದಲ್ಲಿ ನಾಳೆ ಮಧ್ಯಾಹ್ನ ನಡೆಯಲಿರುವ ಸಭೆಯಲ್ಲಿ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎನ್.ವಿಜಯಭಾಸ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡು ಬರ ಪರಿಸ್ಥಿತಿ ಕುರಿತಂತೆ ಕೇಂದ್ರದ ಅಧ್ಯಯನ ತಂಡದೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಕೇಂದ್ರದ ಅಧ್ಯಯನ ತಂಡಕ್ಕೆ ಬರ ಪರಿಸ್ಥಿತಿ ಕುರಿತ ಸಮಗ್ರ ಮಾಹಿತಿಯನ್ನು ಕೂಡ ಸಭೆಯಲ್ಲಿ ನೀಡಲು ಈಗಾಗಲೇ ಸಿದ್ದತೆ ಮಾಡಿಕೊಳ್ಳಲಾಗಿದೆ. ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಕಂಡುಬಂದ ಬೆಳೆ ಹಾನಿ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿ ಕುರಿತಂತೆ ಸಭೆಯಲ್ಲಿ ತಂಡ ಮಾಹಿತಿ ಪಡೆದುಕೊಳ್ಳಲಿದೆ.
ಕೇಂದ್ರ ಸರ್ಕಾರದ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ಅಮಿತಾಬ್ ಗೌತಮ್ ನೇತೃತ್ವದ 10 ಸದಸ್ಯರನ್ನೊಳಗೊಂಡ ಬರ ಅಧ್ಯಯನ ತಂಡ ನಿನ್ನೆ ಮತ್ತು ಇಂದು ಯಾದಗಿರಿ, ರಾಯಚೂರು, ಬಳ್ಳಾರಿ, ದಾವಣಗೆರೆ ಸೇರಿದಂತೆ ಜಿಲ್ಲೆಗಳಲ್ಲಿ ಬರದ ಸ್ಥಿತಿಗತಿಯ ಪರಿಶೀಲನೆ ನಡೆಸಿ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದಿದೆ.

ಮತ್ತೊಂದು ತಂಡವು ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಗದಗ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇನ್ನೊಂದು ತಂಡವು ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿದೆ.

ರಾಜ್ಯದಲ್ಲಿ ಮೂರು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಕೇಂದ್ರ ಸರ್ಕಾರಕ್ಕೆ ನೆರವು ನೀಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಬರದಿಂದಾಗಿ 16,662 ಕೋಟಿ ರೂ.ಗೂ ಹೆಚ್ಚು ಮತದ ನಷ್ಟ ಉಂಟಾಗಿದ್ದು, ಎನ್‍ಡಿಆರ್‍ಎಫ್ ನಿಧಿಯಿಂದ 2434 ಕೋಟಿ ರೂ. ನೀಡುವಂತೆ ಮನವಿ ಮಾಡಲಾಗಿತ್ತು.

ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಬರದ ಸ್ಥಿತಿಗತಿ ಅರಿಯಲು ಬರ ಅಧ್ಯಯನ ತಂಡವನ್ನು ಕಳುಹಿಸಿಕೊಟ್ಟಿದೆ. ಈ ತಂಡ ರಾಜ್ಯ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ದೆಹಲಿಗೆ ಮರಳಲಿದೆ.
ಕೇಂದ್ರ ಸರ್ಕಾರಕ್ಕೆ ಅಧ್ಯಯನ ತಂಡ ನೀಡುವ ವರದಿಯನ್ನು ಆಧರಿಸಿ ರಾಜ್ಯಕ್ಕೆ ಪರಿಹಾರ ಧನವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ