ಇಂದಿರಾಗಾಂಧಿಯವರು ದೇಶ ಕಂಡ ಬಲಿಷ್ಠ ನಾಯಕಿ: ಮಾಜಿ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ನ.19-ಇಂದಿರಾಗಾಂಧಿಯವರು ದೇಶ ಕಂಡ ಬಲಿಷ್ಠ ನಾಯಕಿ. ವಿಶ್ವದ ಅಗ್ರಮಾನ್ಯ ನಾಯಕರಲ್ಲಿ ಒಬ್ಬರಾಗಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಇಂದಿರಾ ಕುಟುಂಬದವರನ್ನು ನಿಂದಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.

ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರ 101ನೇ ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರು ಜಿಲ್ಲಾ ಕೇಂದ್ರ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಡ ಮಹಿಳೆಯರಿಗೆ ಸೀರೆ ವಿತರಿಸಿ ಮಾತನಾಡಿದ ಅವರು, ಇಂದಿರಾಗಾಂಧಿಯವರು ಗರೀಬಿ ಹಠಾವೋ 20 ಅಂಶಗಳ ಕಾರ್ಯಕ್ರಮ, ಬ್ಯಾಂಕ್‍ಗಳ ರಾಷ್ಟ್ರೀಕರಣ ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಂಡು 15 ವರ್ಷಗಳ ಕಾಲ ಪ್ರಧಾನಿಯಾಗಿ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಮಹಿಳೆಯರು, ಬಡವರು, ಆರ್ಥಿಕವಾಗಿ ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕೆಂದು ಹಲವಾರು ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದ್ದರು.

ಆದರೆ ಪ್ರಧಾನಿ ನರೇಂದ್ರ ಮೋದಿಯವರು ಇಂದಿರಾ ಕುಟುಂಬದವರ ಬಗ್ಗೆ ಮಾತ್ರ ಮಾತನಾಡುತ್ತಾರೆ, ಅಭಿವೃದ್ಧಿಯ ಬಗ್ಗೆ, ತಾವು ಮಾಡಿರುವ ಸಾಧನೆ ಬಗ್ಗೆ ಮಾತನಾಡುವುದಿಲ್ಲ. ರಾಜ್ಯ ಸರ್ಕಾರ ರೈತರ 49 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುತ್ತಿದೆ. ಆದರೆ ಕೇಂದ್ರ ಸರ್ಕಾರ ದೊಡ್ಡ ದೊಡ್ಡ ಉದ್ಯಮಿಗಳ ಲಕ್ಷಾಂತರ ಕೋಟಿ ರೂ. ಸಾಲ ಮನ್ನಾ ಮಾಡಿದೆ. ಕೇಂದ್ರ ಸರ್ಕಾರ ಕೇವಲ ಸುಳ್ಳು ಆಶ್ವಾಸನೆಗಳನ್ನು ನೀಡುತ್ತಿದೆ ಎಂದು ಆರೋಪಿಸಿದರು.

ಇಂದಿರಾಗಾಂಧಿ ಕುಟುಂಬದವರು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರು. ಸ್ವಾತಂತ್ರ್ಯನಂತರವೂ ಕೂಡ ತ್ಯಾಗ ಬಲಿದಾನ ಮಾಡಿರುವ ಇತಿಹಾಸವಿದೆ ಎಂದು ಹೇಳಿದರು.
ಕವಿಕಾ ಮಾಜಿ ಅಧ್ಯಕ್ಷ ಎಸ್.ಮನೋಹರ್, ಜಿಲ್ಲಾ ಕೇಂದ್ರ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಜನಾರ್ಧನ್, ಪಿ.ಶಿವಕುಮಾರ್, ಸಲೀಂ, ಶೇಖರ್, ರಾಮಕೃಷ್ಣ, ಹೇಮರಾಜ್‍ಆನಂದ್, ಎಸ್.ಎಂ.ರಾಜ್, ಆಶಾ, ರಚನಾ ಮುಂತಾದವರು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ