ವಿಧಾನಸೌಧದಲ್ಲಿ ರೈತ ಮುಖಂಡರು ಮತ್ತು ಸಕ್ಕರೆ ಪ್ಯಾಕ್ಟರಿ ಮಾಲೀಕರ ಜೊತೆ ಸಭೆ ನಡೆಸಿದ ಸಿ.ಎಂ.

ಬೆಂಗಳೂರು, ನ.20-ಸಕ್ಕರೆ ಕಾರ್ಖಾನೆ ಮಾಲೀಕರು ರೈತರ ಹಣ ಬಾಕಿ ಉಳಿಸಿಕೊಂಡಿದ್ದರಿಂದ ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ವಿಧಾನಸೌಧದಲ್ಲಿ ರೈತ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮಹತ್ವದ ಸಭೆ ನಡೆಸಿದರು.

ಸರ್ಕಾರ ರೈತರ ಹಿತ ಕಾಪಾಡಲು ಬದ್ಧವಾಗಿದೆ.ರೈತರು ಯಾವುದೇ ಕಾರಣಕ್ಕೂ ಬೀದಿಗಿಳಿದು ಹೋರಾಟ ನಡೆಸುವ ಅಗತ್ಯವಿಲ್ಲ. ಸಾಲ ಮನ್ನಾ ಯೋಜನೆ ಅನುಷ್ಠಾನಗೊಳ್ಳುವುದು ಖಚಿತ ಎಂದು ಭರವಸೆ ನೀಡಿದರು.

ಸಭೆಯಲ್ಲಿ ರೈತ ಮುಖಂಡರು ತಮ್ಮ ಸಮಸ್ಯೆಗಳನ್ನು ವಿವರವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಮಹಾರಾಷ್ಟ್ರ ಮಾದರಿಯಲ್ಲಿ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು, ಈ ಸಂದರ್ಭದಲ್ಲಿ ಕಬ್ಬಿನ ಉಪ ಉತ್ಪನ್ನ ಹಾಗೂ ಇಳುವರಿಯನ್ನು ಗಮನದಲ್ಲಿರಿಸಿಕೊಳ್ಳಬೇಕು ಎಂದು ರೈತರು ಒತ್ತಾಯಿಸಿದರು.

ರೈತರ ಬಾಕಿ ಹಣ ಪಾವತಿಗೆ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದ ಮುಖ್ಯಮಂತ್ರಿ, ಈಗಾಗಲೇ ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲಾಡಳಿತ ಬಾಕಿ ಹಣ ಪಾವತಿಗೆ ಕ್ರಮಕೈಗೊಂಡಿದೆ. ರೈತರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ವಾರೆಂಟ್ ಜಾರಿ ಮಾಡಿದಾಗಲೂ ಸರ್ಕಾರ ಮಧ್ಯೆಪ್ರವೇಶಿಸಿ ರೈತರ ಹಿತರಕ್ಷಿಸಿದೆ. ಸರ್ಕಾರದ ಮೇಲೆ ವಿಶ್ವಾಸವಿಡಿ. ರೈತರ ಹಿತರಕ್ಷಣೆಯೇ ನಮ್ಮ ಮೈತ್ರಿ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಕೂಡ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು.

ಈ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಅವುಗಳನ್ನು ಈಡೇರಿಸುವುದಾಗಿಯೂ ಕುಮಾರಸ್ವಾಮಿ ಭರವಸೆ ನೀಡಿದರು.
ಸಭೆಯಲ್ಲಿ ಕೈಗಾರಿಕೆ ಮತ್ತು ಸಕ್ಕರೆ ಖಾತೆ ಸಚಿವ ಕೆ.ಜೆ.ಜಾರ್ಜ್, ಶಾಸಕ ಪಿ.ರಾಜು, ಸಂಸದ ಪ್ರಕಾಶ್ ಹುಕ್ಕೇರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್‍ಭಾಸ್ಕರ್, ಸಚಿವರಾದ ಎಂ.ಸಿ.ಮನಗೂಳಿ, ಎಚ್.ಡಿ.ರೇವಣ್ಣ, ಹಣಕಾಸು ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಐ.ಎನ್.ಎಸ್.ಪ್ರಕಾಶ್, ಸಕ್ಕರೆ ಆಯುಕ್ತ ನಾಗಭೂಷಣ್, ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ, ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ, ಬಾಗಲಕೋಟೆ ಜಿಲ್ಲಾಧಿಕಾರಿ ಶಾಂತರಾಮ್, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಪ್ರಧಾನ ಕಾರ್ಯದರ್ಶಿ ಪಿ.ಸಿ.ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ