ಬೆಂಗಳೂರು, ನ.20- ಮಾಹಿತಿ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ಸರ್ಕಾರ ಇದೇ 29ರಿಂದ ನಾಲ್ಕು ದಿನಗಳ ಕಾಲ ನಗರದಲ್ಲಿ ಬೆಂಗಳೂರು ಟೆಕ್ ಅಂತಾರಾಷ್ಟ್ರೀಯ ಸಮಾವೇಶ ನಡೆಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದೆ.
ಅದಕ್ಕೆ ತಕ್ಕಂತೆ ಬೆಂಗಳೂರು ಕೂಡ ಸಿದ್ದಗೊಳ್ಳುತ್ತಿದೆ.ತಂತ್ರಜ್ಞಾನದ ಬೆಳವಣಿಗೆಗೆ ಪೂರಕವಾಗಿ ಬೆಂಗಳೂರು ಟೆಕ್ ಸಮಾವೇಶ ನಡೆಯುತ್ತಿದ್ದು, ದೇಶ, ವಿದೇಶಗಳಿಂದ 3773 ಪ್ರತಿನಿಧಿಗಳು ಪಾಲ್ಗೊಳ್ಳುತ್ತಿದ್ದಾರೆ. 246ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದೆ.100ಕ್ಕೂ ಹೆಚ್ಚು ನವೋದ್ಯಮಗಳು ಇಲ್ಲಿ ಭಾಗವಹಿಸುತ್ತಿವೆ. ಸುಮಾರು 9 ದೇಶಗಳ ಪ್ರತಿಷ್ಠಿತ ಕಂಪೆನಿಗಳು ಸೇರಿದಂತೆ 1500 ಕ್ಕೂ ಹೆಚ್ಚು ಸಂಸ್ಥೆಗಳು ಪಾಲ್ಗೊಳ್ಳುತ್ತಿದ್ದು, ಸಮಾವೇಶಕ್ಕೆ 11ಸಾವಿರಕ್ಕೂ ಹೆಚ್ಚು ವೀಕ್ಷಕರು ಬರುವ ನಿರೀಕ್ಷೆ ಇದೆ.267 ತಜ್ಞರು ಸಮಾವೇಶದ ವಿವಿಧ ಚರ್ಚಾಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಈ ಸಮಾವೇಶದಲ್ಲಿ ಪಾಲುದಾರಿಕೆ ಮತ್ತು ಸಹಭಾಗಿತ್ವಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಬಂಡವಾಳ ಹೂಡಿಕೆಯ ಯಾವುದೇ ಗುರಿ ಹೊಂದಿಲ್ಲ. ಸಮಾವೇಶದ ಪರಿಣಾಮವಾಗಿ ಬಂಡವಾಳ ಹರಿದು ಬರುವ ನಿರೀಕ್ಷೆ ಇದೆ ಎಂದು ಹೇಳಿದರು.
ಬೆಂಗಳೂರು ಟೆಕ್ ಶೃಂಗಸಭೆಯ ಅಂಗವಾಗಿ 68 ರಾಷ್ಟ್ರಗಳಿಂದ 4157 ತಂಡಗಳು ಹ್ಯಾಕಥಾನ್ನಲ್ಲಿ ಭಾಗವಹಿಸುತ್ತಿವೆ. ಸಿನ್ಲ್ಯಾಂಡ್, ಜರ್ಮನಿ, ಫ್ರಾನ್ಸ್, ನೆದರ್ಲ್ಯಾಂಡ್, ಯಶ್ಸ್ಟೋನಿಯಾ, ಜಪಾನ್, ಆಸ್ಟ್ರೇಲಿಯಾ ಮತ್ತು ಜೆಕ್ ರಾಷ್ಟ್ರಗಳು ಹ್ಯಾಕಥಾನ್ನಲ್ಲಿ ಭಾಗವಹಿಸುತ್ತಿವೆ ಎಂದು ಹೇಳಿದರು.