ಚುನಾವಣೆಗಳಲ್ಲಿ ಇವಿಎಂಗಳ ಬಳಕೆ ಅಬಾದಿತ: ಬ್ಯಾಲೆಟ್ ಪೇಪರ್ ಬಳಕೆಗೆ ಸುಪ್ರೀಂ ನಕಾರ

ನವದೆಹಲಿ: ಮುಂಬರುವ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳನ್ನೇ ಕಡ್ಡಾಯವಾಗಿ ಬಳಸಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.

ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯಿಂದ ಅಕ್ರಮಗಳು ನಡೆಯುತ್ತವೆ. ಇದರಿಂದಾಗಿ ಮತಯಂತ್ರಗಳ ಬದಲಿಗೆ ಮತಪತ್ರ(ಬ್ಯಾಲೆಟ್ ಪೇಪರ್)ಗಳನ್ನು ಬಳಸಲು ಅವಕಾಶ ನೀಡುವಂತೆ ಕೋರಿ ನ್ಯಾಯ ಭೂಮಿ ಎಂಬ ಎನ್ ಜಿ ಒ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಅರ್ಜಿಯನ್ನು ತಳ್ಳಿಹಾಕಿದೆ. ಈ ಮೂಲಕ ಬ್ಯಾಲೆಟ್ ಪೇಪರ್ ಬಳಕೆಗೆ ಒತ್ತಡ ಹೇರುತ್ತಿದ್ದ ವಿಪಕ್ಷಗಳಿಗೆ ಭಾರೀ ಹಿನ್ನಡೆಯಾಗಿದೆ.

ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಅವರನ್ನೊಳಗೊಂಡ ಪೀಠವು ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಮತ ಪತ್ರಗಳ ಬಳಕೆಯನ್ನು ನಿರಾಕರಿಸಿದೆ. ಈ ಮೂಲಕ ಇವಿಎಂಗಳ ಬಳಕೆ ಅಬಾಧಿತವಾಗಿದೆ.

ಚುನಾವಣೆಗಳಲ್ಲಿ ಮತಯಂತ್ರಗಳ ಬಳಕೆಯಿಂದ ಅಕ್ರಮಗಳು ನಡೆಯುತ್ತವೆ ಮತ್ತು ಇವಿಎಂಗಳು ವ್ಯಾಪಕವಾಗಿ ದುರ್ಬಳಕೆಯಾಗುತ್ತವೆ ಎಂಬ ಅರ್ಜಿಯಲ್ಲಿನ ವಾದಕ್ಕೆ ಸುಪ್ರೀಂಕೋರ್ಟ್ ಸಮ್ಮತಿಸಲಿಲ್ಲ. ಪ್ರತಿಯೊಂದು ವ್ಯವಸ್ಥೆ ಮತ್ತು ಯಂತ್ರಗಳು ಸದ್ಬಳಕೆ ಮತ್ತು ದುರ್ಬಳಕೆಗೆ ಒಳಪಡುವ ಸಾಧ್ಯತೆ ಇರುತ್ತದೆ. ಈ ವಿಷಯದಲ್ಲಿ ಎಲ್ಲೆಡೆ ಅನುಮಾನಗಳು ಸರ್ವಸಾಮಾನ್ಯ. ಇವಿಎಂಗಳ ಕಾರ್ಯಕ್ಷಮತೆ ಬಗ್ಗೆ ಈಗಾಗಲೇ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಹೀಗಾಗಿ ಚುನಾವಣೆಗಳಲ್ಲಿ ಮತಪತ್ರಗಳ ಬಳಕೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ನ್ಯಾಯಪೀಠ ಅರ್ಜಿಯನ್ನು ತಳ್ಳಿಹಾಕಿದೆ.

SC rejects plea, for use of ballot paper, instead of EVM

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ