ಬಸ್ ದುರಂತದ ಹಿನ್ನಲೆ, ಜೆಡಿಎಸ್ ಶಾಸಕಾಂಗ ಸಭೆ ರದ್ದು

ಬೆಂಗಳೂರು,ನ.24- ಪಾಂಡವಪುರದ ಕನಗನಮರಡಿ ಸಂಭವಿಸಿದ ಬಸ್ ದುರಂತದ ಹಿನ್ನೆಲೆಯಲ್ಲಿ ಇಂದು ಸಂಜೆ ನಿಗದಿಯಾಗಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ರದ್ದುಪಡಿಸಲಾಗಿದೆ.

ಲೋಕಸಭೆ ಚುನಾವಣೆ ಕಾರ್ಯತಂತ್ರ, ಸಚಿವ ಸಂಪುಟ ವಿಸ್ತರಣೆ, ಪಕ್ಷ ಸಂಘಟನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲು ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರ ನೇತೃತ್ವದಲ್ಲಿ ಇಂದು ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿತ್ತು.

ಪಾಂಡವಪುರ ಸಮೀಪ ಬಸ್ ದುರಂತ ಸಂಭವಿಸಿ 20ಕ್ಕೂ ಹೆಚ್ಚು ಜನ ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು, ಮಂಡ್ಯ ಜಿಲ್ಲೆಯ ಏಳು ಶಾಸಕರು ಅಲ್ಲಿನ ಪರಿಹಾರ ಕಾರ್ಯಗಳಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆಯನ್ನು ರದ್ದು ಮಾಡಲಾಗಿದೆ ಎಂದು ಜೆಡಿಎಸ್ ವಕ್ತಾರ ಟಿ.ಎ.ಶರವಣ ತಿಳಿಸಿದ್ದಾರೆ.

ಮುಖ್ಯಮಂತ್ರಿ ಭೇಟಿ:
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ಪಾಂಡವಪುರ ತಾಲ್ಲೂಕು ಕನಗನಮರಡಿ ಗ್ರಾಮದಲ್ಲಿ ನಡೆದ ಬಸ್ ಅಪಘಾತದ ಸ್ಥಳಕ್ಕೆ ಧಾವಿಸಲಿದ್ದಾರೆ.
ಇಂದು ಸಂಜೆ ನಡೆಯಬೇಕಿದ್ದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡುವಂತೆ ಸೂಚಿಸಿದ ಅವರು, ಅವಘಡ ನಡೆದ ಸ್ಥಳಕ್ಕೆ ತೆರಳಿ ಮೃತರ ಕುಟುಂಬಗಳಿಗೆ ಸಾಂತ್ವಾನ ಹೇಳಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ