ನ.27ರಂದು ದಲಿತ ಸಂಘರ್ಷ ಸಮಿತಿಯ ಪ್ರತಿಭಟನಾ ಮೆರವಣಿಗೆ

ಬೆಂಗಳೂರು, ನ.24- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇದೇ 27ರಂದು ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡಿರುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಬನ್ನಪ್ಪ ಪಾರ್ಕ್‍ನಿಂದ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಆರಂಭಿಸಿ ಮುಖ್ಯಮಂತ್ರಿಗಳ ಗೃಹ ಕಚೇರಿವರೆಗೆ ಹೋಗಿ ಬೇಡಿಕೆಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಬಗರಹುಕುಂ ಸಾಗುವಳಿದಾರರಿಗೆ ಸಚಿವ ಸಂಪುಟದ ತೀರ್ಮಾನದಂತೆ ಕೂಡಲೇ ಸಾಗುವಳಿ ಪತ್ರ ನೀಡಬೇಕು. ವಜಾಗೊಂಡಿರುವ ಬಗರಹುಕುಂ ಸಾಗುವಳಿದಾರರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು.ತೊಟ್ಟಿ, ನೀರಗಂಟಿ, ತಳವಾರಿಕೆದಾರರ ಭೂ ಮಂಜೂರಾತಿಗಾಗಿ ಅರ್ಜಿ ಸಲ್ಲಿಕೆಯ ಗಡುವು ವಿಸ್ತರಿಸಬೇಕು ಹಾಗೂ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಡಿಸಿ ಮನ್ನಾ ಭೂಮಿಯನ್ನು ಪರಿಶಿಷ್ಟ ಜನಾಂಗಗಳಿಗೆ ಮೀಸಲಿಡಬೇಕು ಎಂಬುದೂ ಸೇರಿದಂತೆ ವಿವಿಧ ಆರು ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾ ರ್ಯಾಲಿ ವೇಳೆ ಒತ್ತಾಯಿಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಮಿತಿ ಸದಸ್ಯ ಜೋತಪ್ಪ ಹೊಸಳ್ಳಿ, ಕಾರ್ಯ ಕಾರಿ ಸಮಿತಿ ಸದಸ್ಯ ಅಯ್ಯಪ್ಪ, ಜಿಲ್ಲಾ ಪ್ರಧಾನ ಸಂಚಾಲಕ ತಿಗಳ ಶ್ರೀರಾಮ್ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ