ಮೈತ್ರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು, ಚುನಾವಣೆಗೆ ಪೂರ್ವ ಸಿದ್ದತೆ ಸೇರಿದಂತೆ ಬಿಜೆಪಿಯ ಮಹತ್ವದ ಸಭೆ

ಬೆಂಗಳೂರು, ನ.27- ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕೈಗೊಳ್ಳಬೇಕಾದ ರಣತಂತ್ರಗಳು, ಪಕ್ಷದ ಸಂಘಟನೆ, ಲೋಕಸಭೆ ಚುನಾವಣೆಗೆ ಪೂರ್ವ ಸಿದ್ದತೆ ಸೇರಿದಂತೆ ಹತ್ತು ಹಲವು ವಿಷಯಗಳ ಬಗ್ಗೆ ಚರ್ಚಿಸಲು ಇದೇ 29ರಂದು ಬಿಜೆಪಿಯ ಮಹತ್ವದ ಸಭೆ ನಡೆಯಲಿದೆ.

ಅಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಕೋರ್‍ಕಮಿಟಿ ಸಭೆ, ಶಾಸಕಾಂಗ ಸಭೆ ಹಾಗೂ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಹೋರಾಟ ನಡೆಸುವ ಬಗ್ಗೆ ಚರ್ಚೆ ನಡೆಯಲಿದೆ.

ಅಧಿವೇಶನದ ನಂತರ ರಾಜ್ಯ ರಾಜಕೀಯದಲ್ಲಿ ಕೆಲವು ಮಹತ್ವದ ಬದಲಾವಣೆಗಳು ನಡೆಯಲಿವೆ ಎಂಬ ಮಾತುಗಳು ಕೇಳಿ ಬರುತ್ತಿರುವುದು ಹಾಗೂ ಬಿಜೆಪಿಯೊಳಗಿನ ಕೆಲವು ಶಾಸಕರು ದೋಸ್ತಿ ಸರ್ಕಾರದ ಕೆಲವು ಪ್ರಭಾವಿ ನಾಯಕರ ಜತೆ ಆತ್ಮೀಯ ಒಡನಾಟ ಇಟ್ಟುಕೊಂಡಿರುವುದು ಕಮಲ ನಾಯಕರನ್ನು ಚಿಂತೆಗೀಡು ಮಾಡಿದೆ.
ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿರುವ ಸಂದರ್ಭದಲ್ಲೇ, ಇದಕ್ಕೆ ಪ್ರತಿಯಾಗಿ ಬಿಜೆಪಿಯ ಕೆಲವು ಶಾಸಕರನ್ನು ಕಾಂಗ್ರೆಸ್‍ನ ಪ್ರಭಾವಿ ಸಚಿವರೊಬ್ಬರು ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ ಎಂಬ ಮಾತು ಬಿಜೆಪಿ ಪಾಳಯದಲ್ಲಿ ಕೇಳಿಬರುತ್ತಿದೆ.

ಬೆಂಗಳೂರು ಮೂಲದ ಪ್ರಭಾವಿ ಶಾಸಕರೊಬ್ಬರು ಮೈಸೂರು ಹಾಗೂ ಚಿತ್ರದುರ್ಗ ಸೇರಿದಂತೆ ಮತ್ತಿತರ ಕೆಲವು ಜಿಲ್ಲೆಗಳ ಶಾಸಕರನ್ನು ಸೆಳೆದು ಆಪರೇಷನ್ ಕಮಲಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರಿಗೆ ತಿರುಗೇಟು ನೀಡಲು ಈ ಪ್ರಭಾವಿ ಸಚಿವರು ತೆರೆಮರೆಯಲ್ಲಿ ಕಾರ್ಯತಂತ್ರ ಹೆಣೆದಿದ್ದಾರೆ ಎಂದು ತಿಳಿದು ಬಂದಿದೆ.
ಈ ವಿಷಯ ಬಿಜೆಪಿ ಪಾಳಯ ತಲುಪಿರುವುದರಿಂದ ಅನ್ಯಪಕ್ಷಗಳತ್ತ ಹೋಗದಂತೆ ಪಕ್ಷದಲ್ಲೇ ಉಳಿಸಿಕೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಕೋರ್‍ಕಮಿಟಿ ಸದಸ್ಯರು ಮನವರಿಕೆ ಮಾಡಿಕೊಡಲಿದ್ದಾರೆ. ದೋಸ್ತಿ ಸರ್ಕಾರ ಯಾವುದೇ ಕಾರಣಕ್ಕೂ ಲೋಕಸಭೆ ಚುನಾವಣೆವರೆಗೂ ಅಧಿಕಾರದಲ್ಲಿ ಇರುವುದಿಲ್ಲ. ಕೇವಲ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು ಎಂಬ ಒಂದೇ ಕಾರಣಕ್ಕಾಗಿ ಮೈತ್ರಿ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ನಡೆದಿ ಮೂರು ಲೋಕಸಭೆ, ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಗೆ ಬಹಿರಂಗವಾಗಿಯೇ ವಿರೋಧ ವ್ಯಕ್ತವಾಗಿದೆ. ದೋಸ್ತಿ ಸರ್ಕಾರ ಯಾವುದೇ ಕ್ಷಣದಲ್ಲಾದರೂ ಪತನವಾಗುವುದರಿಂದ ಆಸೆ, ಆಕಾಂಕ್ಷೆಗಳಿಗೆ ಬಲಿಯಾಗದೆ ನಿಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ ಎಂಬ ಮನವೊಲಿಸಲು ಮುಂದಾಗಿದ್ದಾರೆ.

ಉಳಿದಂತೆ ಡಿ.10ರಂದು ಆರಂಭವಾಗಲಿರುವ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಪ್ರಚಲಿತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾರ್ಯತಂತ್ರ ರೂಪಿಸಲಾಗುತ್ತದೆ.

ಕಬ್ಬು ಬೆಳೆಗಾರರ ಸಮಸ್ಯೆ, ರೈತರ ಆತ್ಮಹತ್ಯೆ, ಶಾಸಕರ ಅನುದಾನ ಬಿಡುಗಡೆಯಾಗದಿರುವುದು, ಹಾಲಿನ ಪೆÇ್ರೀ ಧನ ನೀಡದೇ ಇರುವುದು ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ