ವಿವಿಧ ಕಾಮಗಾರಿಗಳಿಗೆ ಡಿ.10ರೊಳಗೆ ಕಾರ್ಯಾದೇಶ

ಬೆಂಗಳೂರು,ನ.28-ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಐದು ಲಕ್ಷ ರೂ. ಒಳಗಿನ ಅಂದಾಜು ವೆಚ್ಚದ ವಿವಿಧ ಕಾಮಗಾರಿಗಳಿಗೆ ಡಿ.10ರೊಳಗೆ ಕಾರ್ಯಾದೇಶ ನೀಡುವಂತೆ ಗ್ರಾಮೀಣಾಭಿವೃದ್ದಿ ಸಚಿವ ಕೃಷ್ಣಭೆರೇಗೌಡ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ.
ಪ್ರಸಕ್ತ ಸಾಲಿನ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕ್ರಿಯಾಯೋಜನೆಗಳನ್ನು ಸಿದ್ಧಪಡಿಸಿ ಅನುಮೋದನೆಯನ್ನು ಪಡೆಯಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಮುಂಗಾರು ಹಂಗಾಮಿನಲ್ಲಿ ರಾಜ್ಯದ 100 ತಾಲ್ಲೂಕುಗಳು ಬರಪೀಡಿತವಾಗಿದ್ದು, ಹಿಂಗಾರು ಹಂಗಾಮಿನಲ್ಲೂ ಮಳೆ ಕೊರತೆ ಹಿನ್ನೆಲೆಯಲ್ಲಿ ಬರದ ಛಾಯೆ ಕಂಡುಬರುತ್ತಿದೆ.

ಈಗಾಗಲೇ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ.ಬರಪೀಡಿತ ಪ್ರದೇಶಗಳು ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು.ಆದ್ಯತೆ ಮೇಲೆ ಕುಡಿಯುವ ನೀರು ಪೂರೈಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು.

ಕುಡಿಯುವ ನೀರಿಗಾಗಿ ತುರ್ತಾಗಿ ಕಾಮಗಾರಿಗಳನ್ನು ಕೈಗೊಳ್ಳುವ ಅಗತ್ಯವಿದ್ದರೆ ಅನುಮೋದನೆಗೆ ಮುನ್ನವೇ ಕೆಲಸ ಮಾಡಿ.ಕಾಮಗಾರಿ ಪೂರ್ಣಗೊಂಡ ನಂತರ ಅನುಮೋದನೆಯನ್ನು ಪಡೆದುಕೊಳ್ಳಿ ಎಂದು ಸಲಹೆಯನ್ನು ಸಚಿವರು ಸಿಇಒಗಳಿಗೆ ನೀಡಿದ್ದಾರೆ.

ಬರ ಪರಿಹಾರ ಕಾರ್ಯದಲ್ಲಿ ಯಾವುದೇ ಕಾರಣಕ್ಕೂ ವಿಳಂಬ ಆಗಬಾರದು.ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಇರುವುದರಿಂದ ಈಗಿನಿಂದಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಇಲಾಖೆ ಆಯುಕ್ತರಾದ ಆರ್.ವಿಶಾಲ್ ಹಾಗೂ ಎಲ್ಲಾ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಸಭೆಯಲ್ಲಿ ಪಾಲೊಗಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ