ಉತ್ತರ ಕರ್ನಾಟಕಕ್ಕೆ ರಾಜ್ಯ ಸರ್ಕಾರದ ಅನುದಾನದಲ್ಲಿ ಅನ್ಯಾಯ, ಮಾಜಿ ಸಿ.ಎಂ. ಜಗದೀಶ್ ಶೆಟ್ಟರ್

ಬೆಂಗಳೂರು, ನ.28-ರಾಜ್ಯ ಸರ್ಕಾರದ ಅನುದಾನ ಹಾಸನ, ರಾಮನಗರ, ಮಂಡ್ಯ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದು, ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಬಂದ ನಂತರ ಅನ್ಯಾಯ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ ಅವರು, ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ಹಾಸನ, ರಾಮನಗರ, ಮಂಡ್ಯಕ್ಕೆ ಸೀಮಿತವಾದ ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ದೂರಿದರು.

ಉತ್ತರ ಕರ್ನಾಟಕದ ಮಹದಾಯಿ ಯೋಜನೆ, ಕೃಷ್ಣ ಕೊಳ್ಳದ ಯೋಜನೆಗಳು ಸೇರಿದಂತೆ ಅಲ್ಲಿನ ಸಮಸ್ಯೆಗಳನ್ನು ನಿರ್ಲಕ್ಷಿಸಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಲೋಕೋಪಯೋಗಿ ಇಲಾಖೆ ಬಗ್ಗೆ ಪರಿಶೀಲಿಸಿದರೆ ಹಾಸನ ಜಿಲ್ಲೆಗೆ ಹೆಚ್ಚಿನ ಯೋಜನೆಗಳು ಇರುವುದು ಗೊತ್ತಾಗುತ್ತದೆ. ಉತ್ತರ ಕರ್ನಾಟಕ ಭಾಗ ಆಗುತ್ತಿರುವ ಅನ್ಯಾಯ, ತಾರತಮ್ಯದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಹೋರಾಟ ಮಾಡುವುದಾಗಿ ಅವರು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ