ಬೆಂಗಳೂರು: 2.0 ಚಿತ್ರ ಪ್ರದರ್ಶನಕ್ಕೆ ವಿರೋಧ: ವಾಟಾಳ್ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷಿತ 2.0 ಚಿತ್ರ ವಿಶ್ವದಾದ್ಯಂತ ಇಂದು ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ.ಈ ನಡುವೆ ರಾಜ್ಯದಲ್ಲಿ ಈ ಚಿತ್ರ ಪ್ರದರ್ಶನಕ್ಕೆ   ಅವಕಾಶ ನೀಡಬಾರದು ಎಂದು ಒತ್ತಾಯಿಸಿ  ಕನ್ನಡ ಚಳವಳಿ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಊರ್ವಶಿ ಚಿತ್ರಮಂದಿರದ ಎದುರು ಪ್ರತಿಭಟನೆ ನಡೆಸಲಾಯಿತು. ಈಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಯಾವುದೇ ಕಾರಣಕ್ಕೂ ಕನ್ನಡ ದ್ರೋಹಿಯಾಗಿರುವ ರಜನಿಕಾಂತ್ ಅಭಿಯನದ 2.0 ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆಗೆ ಅವಕಾಶ ನೀಡಬಾರದು. ಚಿತ್ರ ಬಿಡುಗಡೆಗೆ ಅವಕಾಶ ನೀಡಿದರೆ ಕನ್ನಡ ಚಿತ್ರಗಳಿಗೆ ತೊಂದರೆ ಆಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆ ವೇಳೆ ಚಿತ್ರ ಬಿಡುಗಡೆಯಾದರೆ ಡಿಸೆಂಬರ್ 1 ರಂದು ವಾಣಿಜ್ಯ ಮಂಡಳಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಚಿತ್ರಮಂದಿರಕ್ಕೆ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಪ್ರತಿಭಟನಾ ನಿರತ ವಾಟಾಳ್ ನಾಗರಾಜ್ ಸೇರಿದಂತೆ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ