ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರತಿಭಟನೆ: ಸಂಸತ್ ಭವನಕ್ಕೆ ಮುತ್ತಿಗೆ ಯತ್ನ

ನವದೆಹಲಿ: ಸಾಲ ಮನ್ನಾ, ಕೃಷಿಬೆಳೆಗೆ ಬೆಂಬಲ ಬೆಲೆ ನಿಗದಿ, ಸ್ವಾಮಿನಾಥನ್ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿರುವ ರೈತರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ಇಂದು ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ದೆಹಲಿ ಪೊಲೀಸರು ಪ್ರತಿಭಟನಾ ನಿರತ ರೈತರನ್ನು ಸಂಸತ್ ರಸ್ತೆ ಪೊಲೀಸ್ ಠಾಣೆಯ ಬಳಿ ತಡೆದಿದ್ದಾರೆ.

ರೈತರ ಪ್ರತಿಭಟನಾ ರ್ಯಾಲಿ ಹಿನ್ನೆಲೆಯಲ್ಲಿ ಸಂಸತ್ ಸುತ್ತ ಭಾರಿ ಭದ್ರತೆ ಏರ್ಪಡಿಸಲಾಗಿದ್ದು, ಸುಮಾರು 3,500 ಪೊಲೀಸರನ್ನು ನಿಯೋಜಿಸಲಾಗಿದೆ.

ದೇಶದ 24 ರಾಜ್ಯಗಳಿಂದ ರೈತರು ಆಗಮಿಸಿದ್ದು, ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ, ಖರೀದಿ ಕೇಂದ್ರ ಸ್ಥಾಪನೆ, ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿರುವ ರೈತರ ಸಾಲ ಮನ್ನಾ, ಸ್ವಾಮಿನಾಥನ್ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಹಕಾರ ಸಮಿತಿ ಈ ಪ್ರತಿಭಟನೆಗೆ ಕರೆ ನೀಡಿದ್ದು, ಈ ಹಿನ್ನಲೆಯಲ್ಲಿ ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ರೈತರ ಪ್ರತಿಭಟನೆ ಭುಗಿಲೆದ್ದಿದೆ.

ವಿವಿಧ ರಾಜ್ಯಗಳಿಂದ ಆಗಮಿಸಿರುವ ಸಾವಿರಾರು ನಿನ್ನೆಯಿಂದ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಬೆಳಗ್ಗೆ 10.30ಕ್ಕೆ ಸಂಸತ್ ಭವನ ಮುತ್ತಿಗೆ ಹಾಕಲು ಯತ್ನಿಸಿದರು. ರೈತ ಸಮುದಾಯ, ಅಯೋಧ್ಯೆ ಬೇಡ, ಸಾಲ ಮನ್ನಾ ಬೇಕು ಎಂಬ ಘೋಷಣೆಗಳನ್ನು ಕೂಗುವ ಮೂಲಕ, ತಮ್ಮ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವ ಯತ್ನ ಮಾಡಿದರು.

ಇನ್ನು ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಭಾರಿ ಸಂಚಾರ ದಟ್ಟಣೆ ಎದುರಾಗಿದೆ. ಪ್ರತಿಭಟನೆಗೆ ಕರ್ನಾಟಕ, ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಗುಜರಾತ್ ಮತ್ತು ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ದಹಲಿಗೆ ರೈತರು ಆಗಮಿಸಿದ್ದಾರೆ. ರೈತರು, ಕೃಷಿ ಕಾರ್ಮಿಕರು ಸೇರಿದಂತ ಒಟ್ಟು 207 ರೈತ ಸಂಘಟನೆಗಳು, ತಮ್ಮ ಬೇಡಿಕೆಗಾಗಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಹಕಾರ ಸಮಿತಿ ಬ್ಯಾನರ್ ಅಡಿ ಒಟ್ಟುಗೂಡಿವೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ದಕ್ಷಿಣ ಭಾರತ ನದಿ ಜೋಡಮ ಕೃಷಿ ಸಂಘಟನೆಯ 1200 ಸದಸ್ಯರು, ಆತ್ಮಹತ್ಯೆಗ ಶರಣಾದ ಇಬ್ಬರು ರೈತರ ತಲೆಬುರುಡೆ ಹೊತ್ತು ಮೆರವಣಿಗೆ ನಡೆಸಿದರು.

Farmers protest, All India Kisan Sangharsh Coordination Committee (AIKSCC)

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ