ಬೆಂಗಳೂರು ನ.30- ಡಿಸೆಂಬರ್ 10ರೊಳಗೆ ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ನೇಮಕ ಮಾಡಲಾಗುವುದು.ಯಾವ ಶಾಸಕರು ಎಲ್ಲಿಗೂ ಹೋಗುವುದಿಲ್ಲ. ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದು ಊಹಾಪೊಹ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ 10 ಅತೃಪ್ತ ಶಾಸಕರು ಮುಂಬೈಗೆ ತೆರಳುತ್ತಿದ್ದಾರೆ ಎಂದು ಸುದ್ದಿ ಬಿತ್ತರವಾಗುತ್ತಿದೆ.ಯಾರೂ ಎಲ್ಲಿಗೂ ಹೋಗುವುದಿಲ್ಲ. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಕೆಲವರಿಗೆ ಅಸಮಾಧಾನವಿರುವುದು ನಿಜ. ಈ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಿದ್ದಾರೆ.
ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ನೇಮಕ, ಕ್ಷೇತ್ರಗಳ ಅಭಿವೃದ್ಧಿ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಲು ಸದ್ಯದಲ್ಲೇ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕೂಡ ಪಾಲ್ಗೊಳ್ಳಲಿದ್ದಾರೆ.ಶಾಸಕರ ಸಮಸ್ಯೆಗಳನ್ನು ಆಲಿಸಲಿದ್ದಾರೆ ಎಂದು ಹೇಳಿದರು.
ಸಚಿವ ರಮೇಶ್ ಜಾರಕಿಹೊಳಿ ಅವರ ನಿವಾಸಕ್ಕೆ ಬಿಜೆಪಿಯ ಹಲವು ಮುಖಂಡರು ತೆರಳಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದಕ್ಕೆ ರಾಜಕೀಯ ಬಣ್ಣ ಕಟ್ಟುವುದು ಬೇಡ. ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಪ್ರತಿಪಕ್ಷದ ನಾಯಕ ಯಡಿಯೂರಪ್ಪನವರು ಹೋಗಿದ್ದರು.ಅದರಲ್ಲಿ ತಪ್ಪೇನು? ಬಿ.ಸಿ.ಪಾಟೀಲ್, ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಸಚಿವಾಕಾಂಕ್ಷಿಗಳು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದರೂ ಇಂತಹ ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿರುವುದು ವಿಪರ್ಯಾಸ ಎಂದು ಹೇಳಿದರು.