ಬೆಂಗಳೂರು, ನ.30-ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಸಭೆ ಡಿ.5 ರಂದು ನಡೆಯಲಿದ್ದು, ಅಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡುತ್ತೇವೆ. ಡಿ.8 ರಂದು ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಷ್ಟು ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡಬೇಕೆಂಬ ಅಭಿಪ್ರಾಯ ಇದೆ.ಡಿ.5 ರಂದು ಸಮನ್ವಯ ಸಮಿತಿ ಸಭೆ ನಡೆಸುತ್ತೇವೆ. ಅಲ್ಲಿ ಎಲ್ಲವನ್ನೂ ಚರ್ಚೆ ಮಾಡುತ್ತೇವೆ. ದೆಹಲಿಗೆ ಯಾವಾಗ ಹೋಗಬೇಕು, ಸಂಪುಟ ವಿಸ್ತರಣೆ ಯಾವಾಗ ಮಾಡಬೇಕು ಎಂಬುದನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಡಿ.8ರಂದು ಕರೆಯಲಾಗಿದೆ. ಸಭೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಆಹ್ವಾನಿಸುತ್ತಿದ್ದೇವೆ. ಕಾಂಗ್ರೆಸ್ ಶಾಸಕರು ಮಾತ್ರ ಸಭೆಯಲ್ಲಿ ಭಾಗವಹಿಸುತ್ತಾರೆ, ಜೆಡಿಎಸ್ನವರು ಇರುವುದಿಲ್ಲ. ಶಾಸಕರು ತಮ್ಮ ದೂರುಗಳನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಳ್ಳಬೇಕು. ಹಾಗಾಗಿ ಕುಮಾರಸ್ವಾಮಿಯವರನ್ನು ಆಹ್ವಾನಿಸಲಾಗುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಶಾಸಕರು ಮುಂಬೈ, ದೆಹಲಿಗೆ ತೆರಳಿದ್ದಾರೆ ಎಂಬುದು ಆಧಾರರಹಿತ ಸುದ್ದಿ. ಯಾರೂ ಹೋಗಿಲ್ಲ. ಒಂದು ಪತ್ರಿಕೆ ಮಾತ್ರ ಈ ಬಗ್ಗೆ ವರದಿ ಮಾಡಿದೆ.ಅದು ಸತ್ಯವಾಗಿದ್ದರೆ ಎಲ್ಲ ಪತ್ರಿಕೆಗಳು, ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಬೇಕಿತ್ತು.
ತಮ್ಮ ಬಗ್ಗೆ ಬಿಜೆಪಿ ನಾಯಕ ಈಶ್ವರಪ್ಪ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸುವುದಿಲ್ಲ. ಆತ ಮೆದುಳಿಲ್ಲದ ಮನುಷ್ಯ ಎಂದು ನಾನು ಈಗಾಗಲೇ ಹಲವು ಬಾರಿ ಹೇಳಿದ್ದೇನೆ. ಅವರ ಹೇಳಿಕೆಗೆಲ್ಲ ನಾನು ಪ್ರತಿಕ್ರಿಯಿಸುದಿಲ್ಲ ಎಂದು ಹೇಳಿದರು.