ಬೆಂಗಳೂರು, ಡಿ.1-ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮೈಸೂರು-ಬೆಂಗಳೂರು ಹೆದ್ದಾರಿ ಅಗಲೀಕರಣ ಯೋಜನೆಗೆ ಕೊನೆಗೂ ಮುಕ್ತಿ ಸಿಕ್ಕಿದ್ದು, ಡಿ.8ರಂದು ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಗುತ್ತಿದೆ.
ಇಂದು ಬೆಳಗ್ಗೆ ನಗರದ ಕುಮಾರಕೃಪ ಅತಿಥಿ ಗೃಹದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಯೋಜನೆ ಬಗ್ಗೆ ಕೇಂದ್ರ ಭೂ ಸಾರಿಗೆ ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಮೈಸೂರು-ಬೆಂಗಳೂರು ರಸ್ತೆ ಅಗಲೀಕರಣ ಯೋಜನೆಗೆ ಸಂಬಂಧಪಟ್ಟಂತೆ ಹಲವಾರು ಅಡಚಣೆಗಳಿದ್ದವು. ಅವೆಲ್ಲವನ್ನೂ ಬಗೆಹರಿಸಲಾಗಿದೆ ಎಂದರು.
ಡಿ.8ರಂದು ರಸ್ತೆ ಅಗಲೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಗುವುದು.ಕಾಮಗಾರಿಯನ್ನು ಕೈಗೆತ್ತಿಕೊಂಡು ಶೀಘ್ರವೇ ಪೂರ್ಣಗೊಳಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿರುವ ಹೆದ್ದಾರಿಗಳ ಅಭಿವೃದ್ಧಿಗೆ ತಾವು ಮುಖ್ಯಮಂತ್ರಿ ಆದ ಮೇಲೆ ಈವರೆಗೂ ಮೂರು ಸಭೆಗಳನ್ನು ನಡೆಸಲಾಗಿದ್ದು, ಇಂದು ಕೇಂದ್ರ ಸರ್ಕಾರದ ಅಧಿಕಾರಿಗಳ ಜತೆ ನಾಲ್ಕನೆ ಸಭೆ ನಡೆಸಲಾಗಿದೆ. ಶೇ.80ರಷ್ಟು ಸಮಸ್ಯೆಗಳನ್ನು ಬಗೆಹರಿಸಿ ಕಾಮಗಾರಿಗಳನ್ನು ಚುರುಕುಗೊಳಿಸಲಾಗಿದೆ. ಹೊನ್ನಾವರ, ಚಿತ್ರದುರ್ಗ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ವಿವಿಧ ಕಡೆಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ಚುರಕುಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಕೇಂದ್ರ ಹೆದ್ದಾರಿ ಸಚಿವ ನಿತಿನ್ಗಡ್ಕರಿ ಅವರು ರಾಜ್ಯಕ್ಕೆ ಆಗಮಿಸಿದ್ದು, ಅದಕ್ಕೆ ಪೂರ್ವಭಾವಿಯಾಗಿ ಹಲವು ಯೋಜನೆಗಳ ಕುರಿತು ಇಂದು ಚರ್ಚೆ ನಡೆಸಲಾಗಿದೆ. ಕೆಲವು ಭಾಗಗಳಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಸಮಸ್ಯೆ ಇತ್ತು.ಅದನ್ನು ನಿವಾರಿಸಲಾಗುತ್ತಿದೆ ಎಂದರು.
ಸಗಂಗಾಕಲ್ಯಾಣ ಯೋಜನೆಯ ಪ್ಯಾಕೇಜ್ಗಳ ಸಂಖ್ಯೆಯನ್ನು 31ರಿಂದ 16ಕ್ಕೆ ಇಳಿಸಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಆ ಬಗ್ಗೆ ನನಗೆ ಮಾಹಿತಿ ಇಲ್ಲ. ಪರಿಶೀಲಿಸುತ್ತೇನೆ ಎಂದು ಹೇಳಿದರು.