ಬೆಂಗಳೂರು,ಡಿ.3- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಡಿಸೆಂಬರ್ 5ರಿಂದ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ತಮಿಳುನಾಡು, ಆಂಧ್ರಪ್ರದೇಶದ ಕರಾವಳಿ ಭಾಗ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಮಳೆಯಾಗಲಿದ್ದು, ಈ ಉಭಯ ರಾಜ್ಯಗಳಿಗೆ ಹೊಂದಿಕೊಂಡಿರುವ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲೂ ಹಗುರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ ತಿಳಿಸಿದರು.
ರಾಜ್ಯದ ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಬೆಂಗಳೂರು, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾಗಲಿದೆ. ಆದರೆ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಹೆಚ್ಚಿನ ಪರಿಣಾಮ ಉಂಟಾಗುವುದಿಲ್ಲ. ಭಾರೀ ಮಳೆಯಾಗುವ ಮುನ್ಸೂಚನೆಗಳು ಇಲ್ಲ. ಆದರೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಅವರು ತಿಳಿಸಿದರು.
ಈ ಬಾರಿಯ ಹಿಂಗಾರು ಮಳೆ ಆರಂಭದಿಂದಲೂ ದುರ್ಬಲವಾಗಿದ್ದು, ಕೃಷಿ ಕ್ಷೇತ್ರದ ಮೇಲೆ ಮಾರಕ ಪರಿಣಾಮ ಉಂಟಾಗಿದೆ.ಹಿಂಗಾರು ಬೆಳೆಗಳು ಮಳೆ ಕೊರತೆಯಿಂದ ಒಣಗುವ ಪರಿಸ್ಥಿತಿ ಉಂಟಾಗಿದೆ.ಹಿಂಗಾರಿನಲ್ಲಿ ಬರದ ಛಾಯೆ ಆವರಿಸತೊಡಗಿದೆ.