ನವದೆಹಲಿ, ಡಿ.5-ಕರ್ನಾಟಕದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಕೇಂದ್ರ ಜಲ ಆಯೋಗ ಒಪ್ಪಿಗೆ ನೀಡಿರುವುದನ್ನು ಪ್ರಶ್ನಿಸಿ ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ. ಈ ಬಗ್ಗೆ ಮುಂದಿನ ವಾರ ವಿಚಾರಣೆ ನಡೆಸುವುದಾಗಿ ಸವೋಚ್ಛ ನ್ಯಾಯಾಲಯ ತಿಳಿಸಿದೆ.
ಮೇಕೆದಾಟ ಯೋಜನೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರದ ಜಲಸಂಪನ್ಮೂಲ ಸಚಿವಾಲಯದ ವ್ಯಾಪ್ತಿಗೆ ಬರುವ ಜಲ ಆಯೋಗದ ಕ್ರಮವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಪ್ರಧಾನಿ ಅವರಿಗೆ ಪತ್ರ ಬರೆದು ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.
ಇಂದು ಈ ಅರ್ಜಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್ ಪೀಠ, ಮುಂದಿನ ವಾರ ಇದರ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಮೊನ್ನೆ ದೆಹಲಿಯಲ್ಲಿ ನಡೆದ ಕಾವೇರಿ ನಿರ್ವಹಣಾ ಪ್ರಾಧಿಕಾರದ ಎರಡನೇ ಸಭೆಯಲ್ಲೂ ತಮಿಳುನಾಡು ಆಯೋಗದ ಕ್ರಮದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಇದನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಆಗ್ರಹಿಸಿತ್ತು.