ಬೆಂಗಳೂರು, ಡಿ.6- ಇಂದು ಶ್ರೀಮತಿ ಪಾರ್ವತಮ್ಮ ರಾಜ್ಕುಮಾರ್ ಅವರ 79ನೆ ಜನ್ಮದಿನ. ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಪದ್ಮಭೂಷಣ ಡಾ.ರಾಜ್ಕುಮಾರ್ ಪುಣ್ಯಭೂಮಿಯ ಪಕ್ಕದಲ್ಲೇ ಪಾರ್ವತಮ್ಮನವರ ಸ್ಮಾರಕವನ್ನು ನಿರ್ಮಿಸಲಾಗಿದೆ.ಡಾ.ರಾಜ್ಕುಮಾರ್ ಕುಟುಂಬದ ಸದಸ್ಯರು, ಚಿತ್ರರಂಗದ ಗಣ್ಯರು, ಅಭಿಮಾನಿಗಳು ಇಂದು ಬೆಳಗಿನಿಂದಲೇ ಪಾರ್ವತಮ್ಮನವರ ಸ್ಮಾರಕಕ್ಕೆ ಪೂಜೆ ಸಲ್ಲಿಸಿದರು.
ಜನ್ಮದಿನದ ಅಂಗವಾಗಿ ಚಿತ್ರರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಮೂವರು ಗಣ್ಯರಿಗೆ ಪ್ರತಿವರ್ಷ ಡಾ.ರಾಜ್ಕುಮಾರ್ ಸೌಹಾರ್ದ ಪ್ರಶಸ್ತಿ ನೀಡಲಾಗುತ್ತದೆ. ಕಳೆದ ಎರಡು ವರ್ಷದಿಂದ ಪ್ರಶಸ್ತಿ ಕೊಟ್ಟಿರಲಿಲ್ಲ. ಇಂದು ಮಧ್ಯಾಹ್ನ 3 ಗಂಟೆಗೆ ಕಂಠೀರವ ಸ್ಟುಡಿಯೋದಲ್ಲಿ ನಡೆದ ಸಮಾರಂಭದಲ್ಲಿ ಚಿತ್ರರಂಗದ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ 9 ಮಂದಿಗೆ ಡಾ.ರಾಜ್ಕುಮಾರ್ ಸೌಹಾರ್ದ ಪ್ರಶಸ್ತಿ ಕೊಟ್ಟು ಗೌರವಿಸಲಾಯಿತು. ಪ್ರಶಸ್ತಿಯು ಒಂದು ಲಕ್ಷ ನಗದು, ಸ್ಮರಣ ಫಲಕವನ್ನು ಒಳಗೊಂಡಿದೆ.
ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್, ಪುನಿತ್ ರಾಜ್ಕುಮಾರ್ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.