ಸೋಮವಾರದಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ

ಬೆಂಗಳೂರು,ಡಿ.6- ಸೋಮವಾರದಿಂದ ಕುಂದಾನಗರಿ ಬೆಳಗಾವಿಯ ಸುವರ್ಣಸೌಧದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಕಾವೇರಿದ ಚರ್ಚೆಗೆ ವೇದಿಕೆಯಾಗಲಿದೆ.

ಪ್ರಚಲಿತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಆಡಳಿತಾರೂಢ ದೋಸ್ತಿ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷ ಬಿಜೆಪಿ ತುದಿಗಾಲಲ್ಲಿ ನಿಂತಿದೆ.ಪ್ರತಿಪಕ್ಷದ ಪ್ರತಿಯೊಂದು ಆರೋಪಗಳಿಗೆ ತಕ್ಕ ಎದುರೇಟು ನೀಡಲು ಸರ್ಕಾರ ಕೂಡ ಸಜ್ಜಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಬೆಳಗಾವಿಯಲ್ಲಿ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದ್ದು, ಮುಖ್ಯವಾಗಿ ಕಬ್ಬು ಬೆಳೆಗಾರರ ಸಮಸ್ಯೆ, ರೈತರ ಸಾಲಮನ್ನಾ ಹಾಗೂ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಕುರಿತಂತೆ ಉಭಯ ಸದನಗಳಲ್ಲಿ ಬಿರುಸಿನ ಚರ್ಚೆ ನಡೆಯಲಿದೆ.
ಇನ್ನು ಬೆಳಗಾವಿ ಅಧಿವೇಶನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಕಬ್ಬು ಬೆಳೆಗಾರರ ಸಮಸ್ಯೆ ವಿಧಾನಸಭೆ ಹಾಗೂ ವಿಧಾನಪರಿಷತ್‍ನಲ್ಲಿ ಪ್ರತಿಧ್ವನಿಸುವುದು ಬಹುತೇಕ ಖಚಿತವಾಗಿದೆ.

ಬೆಳಗಾವಿ, ಬಾಗಲಕೋಟೆ ಸೇರಿದಂತೆ ಅನೇಕ ಕಡೆ ರೈತರು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು.ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮಾತುಕತೆ ನಡೆಸಿ ಬಾಕಿ ಇರುವ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಬೇಕೆಂದು ಸೂಚಿಸಿದ್ದಾರೆ.
ಇನ್ನೊಂದೆಡೆ ಪ್ರತಿಭಟನಾನಿರತ ರೈತರ ಜೊತೆ ಸಚಿವ ಡಿ.ಕೆ.ಶಿವಕುಮಾರ್ ನಡೆಸಿದ ಸಂಧಾನ ಯಶಸ್ವಿಯಾಗಿತ್ತು.ಆದರೆ ಕಬ್ಬು ಬೆಳೆಗಾರರಿಗೆ ಈವರೆಗೂ ಸಕ್ಕರೆ ಕಾರ್ಖಾನೆ ಮಾಲೀಕರು ಬಾಕಿ ವೇತನವನ್ನು ನೀಡದಿರುವುದು ರೈತರ ಕಣ್ಣು ಕೆಂಪಾಗುವಂತೆ ಮಾಡಿದೆ.
ಸೋಮವಾರದಿಂದ ಬೆಳಗಾವಿಯಲ್ಲಿ ರೈತರು ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಿದ್ದಾರೆ.
ಬರಗಾಲದ ಚರ್ಚೆ:
ಈ ಬಾರಿ ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಕೈಕೊಟ್ಟಿದ್ದರಿಂದ ಸರ್ಕಾರ ಈಗಾಗಲೇ 100ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದೆ.ಈ ತಾಲ್ಲೂಕುಗಳಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಜನರಿಗೆ ಕೆಲಸವಿಲ್ಲದೆ ಗುಳೇ ಹೋಗುತ್ತಿದ್ದಾರೆಂಬ ಆರೋಪವೂ ಕೇಳಿಬರುತ್ತಿದೆ.

ಸರ್ಕಾರ ಸಮರ್ಪಕವಾಗಿ ಬರ ನಿರ್ವಹಣೆ ಮಾಡಿಲ್ಲ ಎಂಬುದು ಪ್ರತಿಪಕ್ಷಗಳು ಆರೋಪಿಸಿವೆ. ಅಲ್ಲದೆ ಐದು ತಂಡವಾಗಿ ಪ್ರತಿಪಕ್ಷದ ನಾಯಕರು ರಾಜ್ಯಾದ್ಯಂತ ಬರ ಅಧ್ಯಯನ ನಡೆಸಿದ್ದಾರೆ.

ಸಿಎಂ ಕುಮಾರಸ್ವಾಮಿ ಇತ್ತೀಚೆಗೆ ಜಿಲ್ಲಾಧಿಕಾರಿ ಹಾಗೂ ಸಿಇಓಗಳ ಸಭೆಯಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಸೇರಿದಂತೆ ಬರ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೂ ಬರ ನಿರ್ವಹಣೆ ಅಷ್ಟು ಸಮರ್ಪಕವಾಗಿ ನಡೆಯುತ್ತಿಲ್ಲ ಆರೋಪಗಳು ಕೇಳಿಬರುತ್ತಲೆ ಇವೆ.

ಸಾಲಮನ್ನಾ:
ಇನ್ನು ಈ ಬಾರಿಯ ಅಧಿವೇಶನದಲ್ಲಿ ರೈತರು ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‍ಗಳಿಂದ ಪಡೆದಿರುವ ಬೆಳೆ ಸಾಲ ಮನ್ನಾ ಕುರಿತಂತೆ ಹೆಚ್ಚು ಚರ್ಚೆಗೆ ಬರುವ ನಿರೀಕ್ಷೆಯಿದೆ. ಹಣಕಾಸು ಖಾತೆ ಹೊಂದಿರುವ ಕುಮಾರಸ್ವಾಮಿ ಅವರು ಬಜೆಟ್‍ನಲ್ಲಿ ರೈತರ ಸಾಲಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದರು. ಈಗಾಗಲೇ ಘೋಷಣೆಯಾಗಿ 6 ತಿಂಗಳಾದರೂ ರೈತರಿಗೆ ಋಣಮುಕ್ತ ಪತ್ರ ನೀಡಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ಇದನ್ನೆ ಮುಂದಿಟ್ಟುಕೊಂಡು ಸರ್ಕಾರವನ್ನು ಹಣಿಯಲು ಪ್ರತಿಪಕ್ಷ ಸಜ್ಜಾಗಿದೆ.

ಉಳಿದಂತೆ ಅತಿವೃಷ್ಟಿ, ಅನಾವೃಷ್ಟಿ, ಬೆಳೆ ಪರಿಹಾರ, ರೈತರ ಆತ್ಮಹತ್ಯೆ,ವಿದ್ಯುತ್ ಸಮಸ್ಯೆ, ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳು, ಕೊಡಗಿನ ಪುನರ್ವವಸತಿ ಸೇರಿದಂತೆ ಪ್ರಚಲಿತ ಸಮಸ್ಯೆಗಳು ಪ್ರತಿಧ್ವನಿಸಲಿವೆ.
ಈ ಬಾರಿ ಪ್ರತಿಪಕ್ಷವು ಆಡಳಿತ ಪಕ್ಷದಷ್ಟೇ ಪ್ರಬಲವಾಗಿರುವುದರಿಂದ ಮಾತಿಗೆ ಮಾತು, ಏಟಿಗೆ ಏಟು,ಆರೋಪಕ್ಕೆ ಪ್ರತ್ಯಾರೋಪ ನಡೆಯುವುದರಿಂದ ಉಭಯ ಸದನದ ಕಲಾಪ ರಂಗೇರುವುದರಲ್ಲಿ ಅನುಮಾನವೇ ಇಲ್ಲ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ