ಬೆಂಗಳೂರು, ಡಿ.8- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಇಂದು ದೊಡ್ಡಬಳ್ಳಾಪುರ ಮತ್ತು ಸೇಡಂನಲ್ಲಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ನೀಡುವ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಇತರೆ ಸಚಿವರ ಸಮ್ಮುಖದಲ್ಲಿ ರೈತರಿಗೆ ಋಣಮುಕ್ತ ಪತ್ರ ನೀಡಲಾಯಿತು.
ಸೇಡಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶಂಪುರ್ ರೈತರಿಗೆ ಪ್ರಮಾಣಪತ್ರ ವಿತರಿಸಿದರು.
ಜೆಡಿಎಸ್ ಮತ್ತು ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ಬೆನ್ನಲ್ಲೇ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳಲ್ಲಿನ ರೈತ ಸಾಲವನ್ನು ಸರ್ಕಾರ ಮನ್ನಾ ಮಾಡುವ ಘೋಷಣೆ ಮಾಡಿತ್ತು. ಅದರಂತೆ ಸಾಲ ಮನ್ನಾಗೆ ಕ್ರಮ ಕೈಗೊಂಡ ಸರ್ಕಾರ ಸಾಂಕೇತಿಕವಾಗಿ ಇಂದು ನಡೆದ ಕಾರ್ಯಕ್ರಮದಲ್ಲಿ ಋಣಮುಕ್ತ ಪ್ರಮಾಣ ಪತ್ರ ನೀಡಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 17300 ರೈತರಿಗೆ ಸಹಕಾರಿ ಬ್ಯಾಂಕುಗಳಲ್ಲಿ ಪಡೆದ ಸಾಲವನ್ನು ಮನ್ನಾ ಮಾಡಲಾಗಿದೆ. ಸಾಲ ಮನ್ನಾ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿತ್ತಲ್ಲದೆ, ಉನ್ನತ ಮಟ್ಟದ ಸಮಿತಿ ರಚಿಸಿ ರೈತರ ದಾಖಲೆ ಪಡೆದು ಹಂತ ಹಂತವಾಗಿ ಸಾಲ ಮನ್ನಾ ಯೋಜನೆ ಕಾರ್ಯಗತಗೊಳಿಸಿ ಇಂದು ಋಣಮುಕ್ತ ಪತ್ರ ನೀಡಲಾಯಿತು.