ಬೆಂಗಳೂರು, ಡಿ.8- ಎಲ್ಲ ಸರ್ಕಾರಗಳ ಉತ್ತರ ಕರ್ನಾಟಕ ನಿರ್ಲಕ್ಷ್ಯ ಧೋರಣೆ ಖಂಡಿಸಿ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣ ಸೌಧದ ಎದುರು ಏಕಾಂಗಿ ಪ್ರತಿಭಟನೆ ನಡೆಸಿದ ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, 1956ರಿಂದಲೂ ಉತ್ತರ ಕರ್ನಾಟಕವನ್ನು ಕಡೆಗಣಿಸಲಾಗುತ್ತಿದೆ. ಎಲ್ಲ ಸರ್ಕಾರಗಳು ಮಲತಾಯಿ ಧೋರಣೆ ಅನುಸರಿಸುತ್ತಿವೆ. ಈ ಭಾಗದ ಅಭಿವೃದ್ಧಿಗೆ ಪ್ರತ್ಯೇಕ ಅನುದಾನ ಮೀಸಲಿಡಬೇಕೆಂದು ಆಗ್ರಹಿಸಿದರು.
ಈವರೆಗೆ ಉತ್ತರ ಕರ್ನಾಟಕದ ಅಭಿವೃದ್ಧಿ ಮಾಡಿರುವ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು. ಹೈದರಾಬಾದ್ ಕರ್ನಾಟಕ, ಉಕ ಅಭಿವೃದ್ಧಿಗೆಂದು ಜಾರಿಗೊಳಿಸಿದ 371 ಜೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂದು ಅವರು ಆರೋಪಿಸಿದರು.
ನೀರಾವರಿ, ವಿದ್ಯುತ್‍ಚಕ್ತಿ, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಈ ಭಾಗಗಳಿಗೆ ಸಚಿವರು ಬಂದು ಹೋಗಲು ಹಿಂದೇಟು ಹಾಕುತ್ತಾರೆ. ಸುವರ್ಣ ಸೌಧ ಕೇವಲ ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ. ವರ್ಷಕ್ಕೊಂದು ಅಧಿವೇಶ ಹೊರತುಪಡಿಸಿದರೆ ಯಾವುದೇ ಚಟುವಟಿಕೆಗಳು ಇಲ್ಲಿ ನಡೆಯುತ್ತಿಲ್ಲ. ಉತ್ತರ ಕರ್ನಾಟಕ ಭಾಗದವರೊಬ್ಬರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಸಚಿವ ಸಂಪುಟದಲ್ಲಿ ಹೆಚ್ಚು ಸ್ಥಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.