ಬೆಂಗಳೂರು, ಡಿ.8- ಕುಂದಾ ನಗರಿ ಬೆಳಗಾವಿಯಲ್ಲಿ ಸೋಮವಾರದಿಂದ ಆರಂಭವಾಗಲಿರುವ ಪ್ರಸಕ್ತ ಚಳಿಗಾಲದ ಅಧಿವೇಶನದಲ್ಲಿ ಮೊದಲ ದಿನವೇ ದೋಸ್ತಿ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಬಿಸಿ ಮುಟ್ಟಿಸಲು ಸಜ್ಜಾಗಿದೆ.
ಸೋಮವಾರ ಬೆಳಗಾವಿ ಹೊರ ವಲಯದ ಅಲರವಾಡ್ ಕ್ರಾಸ್ ಬಳಿ ರೈತರ ಸಮಾವೇಶ ನಡೆಯಲಿದ್ದು , ಸುಮಾರು 1 ಲಕ್ಷಕ್ಕೂ ಹೆಚ್ಚು ಅನ್ನದಾತರನ್ನು ಸೇರಿಸಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಲಿದ್ದಾರೆ.
ಈಗಾಗಲೇ ಸಮಾವೇಶ ನಡೆಯುವ ಸ್ಥಳದಲ್ಲಿ ಬಿರುಸಿನ ಸಿದ್ಧತೆಗಳು ನಡೆದಿವೆ. ಹುಬ್ಬಳ್ಳಿ, ಗದಗ, ಬೆಳಗಾವಿ ಜಿಲ್ಲೆಗಳ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ವಿಧಾನಸಭೆಯ ಪ್ರತಿಪಕ್ಷದ ನಾಯಕ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.
ಮುಖಂಡರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ , ಆರ್.ಅಶೋಕ್, ಸಂಸದರಾದ ಸುರೇಶ್ ಅಂಗಡಿ, ಪ್ರಹ್ಲಾದ್ ಜೋಷಿ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಗೋವಿಂದ ಕಾರಜೋಳ ಸೇರಿದಂತೆ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪ್ರಮುಖರು ಭಾಗವಹಿಸಲಿದ್ದಾರೆ.
ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸದಿರುವುದು, ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರೈತರು ಪಡೆದಿರುವ ಸಾಲವನ್ನು ಮನ್ನಾ ಮಾಡದಿರುವುದು, ಕಬ್ಬಿಗೆ ಬೆಂಬಲ ಬೆಲೆ ಘೋಷಣೆ, ರೈತರ ಇತರೆ ಬೆಳೆಗಳಿಗೆ ಬೆಂಬಲ ಬೆಲೆ, ಬರಗಾಲ ನಿರ್ವಹಣೆ ವೈಫಲ್ಯ, ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ಸರ್ಕಾರದ ವೈಫಲ್ಯಗಳನ್ನು ಸಮಾವೇಶದಲ್ಲಿ ಬಿಜೆಪಿ ನಾಯಕರು ತರಾಟೆಗೆ ತೆಗೆದುಕೊಳ್ಳಲಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ರೈತರಿಗೆ ಇದುವರೆಗೂ ಸಾಲಮನ್ನಾ ಕುರಿತಂತೆ ಋಣಮುಕ್ತ ಪತ್ರ ನೀಡಿಲ್ಲ ಎಂಬ ಆರೋಪವಿದೆ.
ಅಲ್ಲದೆ ರೈತರ ಸಾಲ ಮನ್ನಾ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದರೂ ನಾಡಿನ ಅನ್ನದಾತನ ಆತ್ಮಹತ್ಯೆಗಳು ನಿಂತಿಲ್ಲ.ರೈತರಿಗೆ ಬ್ಯಾಂಕ್ ಅಧಿಕಾರಿಗಳಿಂದ ನಿರಂತರವಾಗಿ ನೋಟಿಸ್ ನೀಡಲಾಗುತ್ತಿದೆ. ಸಾಲ ಮನ್ನಾ ಆಗದಿರುವ ಕಾರಣ ಬ್ಯಾಂಕ್ಗಳಲ್ಲಿ ರೈತರಿಗೆ ಹೊಸದಾಗಿ ಸಾಲವನ್ನು ನೀಡುತ್ತಿಲ್ಲ. ಈ ಎಲ್ಲಾ ಅಂಶಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿ ಬೀಳಲು ಬಿಜೆಪಿ ಸಜ್ಜಾಗಿದೆ.