ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಕ್ರಮ, ಸಿ.ಎಂ.ಕುಮಾರಸ್ವಾಮಿ

ಬೆಳಗಾವಿ(ಸುವರ್ಣಸೌಧ), ಡಿ.11-ರಾಜ್ಯದ ಪದವಿಪೂರ್ವ ಕಾಲೇಜುಗಳಿಗೆ ಈಗಾಗಲೇ 1204 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಇನ್ನು 1512 ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಸಾಗರ ಕ್ಷೇತ್ರದ ಶಾಸಕ ಎಚ್.ಹಾಲಪ್ಪ ಅವರು ಮಾತನಾಡಿ, ತಮ್ಮ ಕ್ಷೇತ್ರದ ಕಾಲೇಜಿನಲ್ಲಿ 2284 ವಿದ್ಯಾರ್ಥಿಗಳಿದ್ದಾರೆ. ಉಪನ್ಯಾಸಕರ ಕೊರತೆ ಇದೆ.148 ಮಂದಿ ವಿದ್ಯಾರ್ಥಿಗಳನ್ನು ಒಂದೇ ಕೊಠಡಿಯಲ್ಲಿ ಕೂಡಿ ಹಾಕಿ ಬಹಿರಂಗ ಸಭೆಯಂತೆ ಪಾಠ ಮಾಡಲಾಗುತ್ತಿದೆ.ಸರ್ಕಾರ ಇದನ್ನು ಗಮನಿಸುತ್ತಿಲ್ಲವೇ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿಗಳು, 2007ರ ಶಿಕ್ಷಕರ ವರ್ಗಾವಣೆ ಅಧಿನಿಯಮ ಅನುಸಾರ 10 ವರ್ಷ ಮೇಲ್ಪಟ್ಟು ಎ ವಲಯದಲ್ಲಿ ಕೆಲಸ ಮಾಡುತ್ತಿರುವ ಉಪನ್ಯಾಸಕರನ್ನು ಶೇ.5ರ ಮಿತಿ ಒಳಪಟ್ಟು ಗ್ರಾಮೀಣಭಾಗದ ಸಿ ವಲಯಕ್ಕೆ ವರ್ಗಾವಣೆ ಮಾಡಲಾಗಿದೆ.ಈ ರೀತಿ 596 ಉಪನ್ಯಾಸಕರನ್ನು ವರ್ಗಾವಣೆ ಮಾಡಲಾಗಿದೆ.ಖಾಲಿ ಇರುವ ಸ್ಥಾನಗಳಿಗೆ ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ನೇಮಿಸಲು 2997 ಅತಿಥಿ ಉಪನ್ಯಾಸಕರನ್ನು ನಿಯೋಜಿಸಲಾಗುತ್ತಿದೆ ಎಂದು ಹೇಳಿದರು.

ಈಗಾಗಲೇ 1204 ಉಪನ್ಯಾಸಕರನ್ನು ನೇಮಿಸಲಾಗಿದ್ದು, ಅವರು ಮುಂದಿನ ಶೈಕ್ಷಣಿಕ ವರ್ಷದಿಂದ ಸೇವೆಗೆ ಹಾಜರಾಗಲಿದ್ದಾರೆ.ಜೊತೆಗೆ ಉಪನ್ಯಾಸಕರ ಕೊರತೆ ನೀಗಿಸುವ ಸಲುವಾಗಿಯೇ 1512 ಹುದ್ದೆಗಳನ್ನು ನೇರ ನೇಮಕಾತಿ ಮಾಡಲು ಪರಿಶೀಲಿಸಲಾಗುತ್ತಿದೆ ಎಂದರು.
ಬಿಜೆಪಿ ಶಾಸಕ ಜೆ.ಸಿ.ಮಾಧುಸ್ವಾಮಿ, ವಿನಾಕಾರಣ ವರ್ಗಾವಣೆಗೊಂಡಿರುವ ಉಪನ್ಯಾಸಕರ ಪಟ್ಟಿ ಇದೆ.ಅವರ ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿದರು.ಅದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು.

ಅಗತ್ಯವಿರುವ ಕಡೆ ಹೊಸದಾಗಿ ಪ್ರಥಮ ದರ್ಜೆ ಕಾಲೇಜು ಮಂಜೂರು ಮಾಡಲು ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಸೂಚಿಸಿರುವುದಾಗಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

ಶಾಸಕ ಬಸನಗೌಡ ದದ್ದಲ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಹೊಸ ಕಾಲೇಜುಗಳ ಅಗತ್ಯತೆ , ವಿದ್ಯಾರ್ಥಿಗಳ ಸಂಖ್ಯೆ, ಜಾಗದ ಲಭ್ಯತೆ ಕುರಿತು ರಾಜ್ಯದ ವಿವಿಧ ಭಾಗಗಳಿಂದ ವರದಿ ತರಿಸಿಕೊಳ್ಳಲಾಗುತ್ತಿದೆ. ಎಲ್ಲೆಲ್ಲಿ ಸಾಧ್ಯವಿದೆಯೋ ಅಲ್ಲೆಲ್ಲ ಹೊಸ ಕಾಲೇಜು ಮಂಜೂರು ಮಾಡುವ ಕುರಿತು ಚಿಂತನೆ ನಡೆಸಲಾಗುವುದು.ಆ ಸಂದರ್ಭದಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದಲ್ಲೂ ಪ್ರಸ್ತಾವನೆಯಿರುವ ಎರಡು ಕಾಲೇಜುಗಳನ್ನು ಮಂಜೂರು ಮಾಡಲು ಕ್ರಮಕೈಗೊಳ್ಳುವುದಾಗಿ ಹೇಳಿದರು.

ಇದಕ್ಕೂ ಮೊದಲು ಮಾತನಾಡಿದ ಬಸನಗೌಡ ದದ್ದಲ್ ಅವರು, ತಮ್ಮ ಕ್ಷೇತ್ರದ ವಿದ್ಯಾರ್ಥಿಗಳು 50 ಕಿಲೋಮೀಟರ್ ದೂರದಲ್ಲಿರುವ ಕಾಲೇಜಿಗೆ ಹೋಗಬೇಕಾಗಿದೆ. ಸಮಯಕ್ಕೆ ಸರಿಯಾಗಿ ಬಸ್‍ಗಳಿಲ್ಲ. ತೀವ್ರ ತೊಂದರೆಯಾಗಿದೆ.ಕ್ಷೇತ್ರದಲ್ಲಿ 28 ಪ್ರೌಢಶಾಲೆ, 4 ಪಿಯುಸಿ ಕಾಲೇಜುಗಳಿವೆ. ವಿದ್ಯಾರ್ಥಿಗಳ ಕೊರತೆ ಇಲ್ಲ. ಆದರೆ ಪದವಿ ಕಾಲೇಜು ಇಲ್ಲದೆ ತೊಂದರೆಯಾಗಿದೆ ಎಂದು ಗಮನ ಸೆಳೆದರು.
ಇದಕ್ಕೆ ಮಧ್ಯಪ್ರವೇಶಿಸಿದ ಸ್ಪೀಕರ್ ರಮೇಶ್‍ಕುಮಾರ್ ಅವರು, ಸರ್ಕಾರ ನಡೆಯುವುದೇ ಹೀಗೆ.ನೀವು ಅದನ್ನು ತಾಳ್ಮೆಯಿಂದ ಸಹಿಸಿಕೊಳ್ಳಬೇಕು.ಸಚಿವರನ್ನು ಭೇಟಿ ಮಾಡಿ ಒತ್ತಡ ಹಾಕಿ ಕೆಲಸ ಮಾಡಿಸಿಕೊಳ್ಳಿ ಎಂದು ಸೂಚನೆ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ