ಜೆಡಿಎಸ್ ಮತ್ತು ಕಾಂಗ್ರೇಸಿನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಬೆಳಗಾವಿ(ಸುವರ್ಣಸೌಧ),ಡಿ.13- ಸಭಾಪತಿ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜೆಡಿಎಸ್ ಮತ್ತು ಕಾಂಗ್ರೆಸ್ ಪಾಳೆಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಕಾಂಗ್ರೆಸ್‍ನಿಂದ ಸಭಾಪತಿ ಸ್ಥಾನದ ಆಕಾಂಕ್ಷಿಯಾಗಿದ್ದ ಎಸ್.ಆರ್.ಪಾಟೀಲರಿಗೆ ಕಡೇ ಗಳಿಗೆಯಲ್ಲಿ ಸಭಾಪತಿ ಸ್ಥಾನ ಕೈತಪ್ಪಿದ್ದು ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ಮುಖಂಡರಲ್ಲಿ ತೀವ್ರ ಅಸಮಾಧಾನ ಸೃಷ್ಟಿಸಿದೆ.

ಈಗಾಗಲೇ ಸಂಪುಟ ವಿಸ್ತರಣೆಯಾಗದೆ ಸಚಿವಾಕಾಂಕ್ಷಿಗಳಾದ ಕಾಂಗ್ರೆಸ್ ಶಾಸಕರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುತ್ತಿದ್ದಾರೆ. ಇದೀಗ ಎಸ್.ಆರ್.ಪಾಟೀಲರಿಗೆ ಸಭಾಪತಿ ಸ್ಥಾನ ಕೈ ತಪ್ಪಿದ್ದರಿಂದ ಅತೃಪ್ತ ಶಾಸಕರು ಮತ್ತಷ್ಟು ಕೆರಳುವಂತೆ ಮಾಡಿದೆ.

ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ತಮ್ಮ ಅಸಮಾಧಾನ ತೋಡಿಕೊಂಡಿರುವ ಬೆಂಬಲಿಗ ಶಾಸಕರು, ಈ ಕೂಡಲೇ ರಾಜ್ಯಕ್ಕೆ ಆಗಮಿಸುವಂತೆ ಮನವಿ ಮಾಡಿಕೊಂಡಿದ್ದರ ಬೆನ್ನಲ್ಲೇ ಸಿದ್ದರಾಮಯ್ಯ ವಿದೇಶ ಪ್ರವಾಸದಿಂದ ವಾಪಸ್ಸಾಗಿದ್ದು, ಅತೃಪ್ತಿ ಶಮನಕ್ಕೆ ಮುಂದಾಗಿದ್ದಾರೆ.
ಮತ್ತೊಂದೆಡೆ ಜೆಡಿಎಸ್‍ನಲ್ಲೂ ಇದೇ ಪರಿಸ್ಥಿತಿ ಮುಂದುವರೆದಿದೆ.ಬಸವರಾಜ ಹೊರಟ್ಟಿಗೆ ಸಭಾಪತಿ ಸ್ಥಾನ ಕೈ ತಪ್ಪಿದ್ದರಿಂದ ಜೆಡಿಎಸ್‍ನಲ್ಲೂ ಅಸಮಾಧಾನ ಭುಗಿಲೆದ್ದಿದೆ.ಜೆಡಿಎಸ್‍ನಲ್ಲೂ ಅಸಮಾಧಾನ ಶಮನಕ್ಕೆ ಪ್ರಯತ್ನಗಳು ಮುಂದುವರೆದಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ